ಹಸುಗಳ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ: ಬಿ.ದಯಾನಂದ್

Update: 2025-01-15 15:38 GMT

ಬೆಂಗಳೂರು : ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ನಮ್ಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯ ಸಾಕ್ಷ್ಯ ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ, ತೀವ್ರಗತಿಯಲ್ಲಿ ತನಿಖೆ ಮುಂದುವರೆದಿದೆ ಎಂದರು.

ಈ ಘಟನೆಯ ಹಿಂದೆ ಬೇರೆಯವರ ಕೈವಾಡ ಇದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿ.ದಯಾನಂದ್, ಪ್ರಕರಣವು ತನಿಖಾ ಹಂತದಲ್ಲಿರುವುದರಿಂದ ಇದರ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದರು.

ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಅತಿಶೀಘ್ರದಲ್ಲೇ ಬಂಧಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ಪ್ರಕರಣದಲ್ಲಿ ಶೀಘ್ರದಲ್ಲೇ ಚಾರ್ಜ್‍ಶೀಟ್ ಸಲ್ಲಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು ಬಿ.ದಯಾನಂದ್ ತಿಳಿಸಿದರು.

ಚಿನ್ನಾಭರಣ ಹಾಗೂ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿರುವ ಐಶ್ವರ್ಯಗೌಡ ಮೇಲೆ ನಗರದಲ್ಲಿ ಮೂರು ಪ್ರಕರಣಗಳು ಹಾಗೂ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ನಗರ ವ್ಯಾಪ್ತಿಯ ಪ್ರಕರಣಗಳ ತನಿಖೆ ಮುಂದುವರೆದಿದ್ದು, ಹಲವು ಮಾಹಿತಿಗಳನ್ನು ಸಂಗ್ರಹಿಸಲಾಗಿದೆ ಎಂದು ಬಿ.ದಯಾನಂದ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News