ಬೆಂಗಳೂರು | ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ : ಮೂವರ ಬಂಧನ, ಬಾಂಗ್ಲಾ ಮೂಲದ ಅಪ್ರಾಪ್ತೆಯ ರಕ್ಷಣೆ
ಬೆಂಗಳೂರು : ನಗರದಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ನಡೆಸಿ ಬಾಂಗ್ಲಾದೇಶ ಮೂಲದ ಇಬ್ಬರು ಅಪ್ರಾಪ್ತೆಯನ್ನು ರಕ್ಷಿಸಿದ ಸಿಸಿಬಿ ಪೊಲೀಸರು, ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಕರಿಷ್ಮಾ ಶೇಖ್ ಯಾನೆ ಮುಸ್ಕಾನ್, ಸೂರಜ್ ಶಾಹಜೀ ಹಾಗೂ ಸುಬ್ರಹ್ಮಣ್ಯ ಶಾಸ್ತ್ರೀ ಎಂಬುವರು ಬಂಧಿತ ಆರೋಪಿಗಳಾಗಿದ್ದು, ಈ ದಾಳಿ ವೇಳೆಯಲ್ಲಿ 15 ಮತ್ತು 16 ವರ್ಷ ವಯಸ್ಸಿನ ಅಪ್ರಾಪ್ತ ಬಾಂಗ್ಲಾದೇಶದ ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ನಗರದ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಬಗ್ಗೆ ಮಾಹಿತಿ ಪಡೆದು ಆ.30ರ ಶುಕ್ರವಾರ ಸಿಸಿಬಿ ಡಿಸಿಪಿ ಅಬ್ದುಲ್ ಅಹದ್ ಮಾರ್ಗದರ್ಶನದಲ್ಲಿ ಮಹಿಳಾ ಸಂರಕ್ಷಣಾ ದಳದ ಎಸಿಪಿ ಎಚ್.ಎನ್.ಧರ್ಮೇದ್ರ ನೇತೃತ್ವದ ತಂಡ ದಾಳಿ ನಡೆಸಿರುವುದಾಗಿ ಸಿಸಿಬಿ ಅಧಿಕಾರಿಗಳು ಹೇಳಿದ್ದಾರೆ.
ಕರಿಷ್ಮಾ ಶೇಖ್ ಹಾಗೂ ಸೂರಜ್ ಮೂಲತಃ ಪಶ್ಚಿಮ ಬಂಗಾಳ ರಾಜ್ಯದವರಾಗಿದ್ದು, ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಕೆಲಸದ ನೆಪದಲ್ಲಿ ಬಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯನ್ನು ಬಾಡಿಗೆ ಪಡೆದುಕೊಂಡು ಅಲ್ಲಿ ಆರೋಪಿಗಳು ತಮ್ಮ ದಂಧೆಯನ್ನು ನಡೆಸುತ್ತಿದ್ದರು. ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದ ಇಬ್ಬರನ್ನು ಬಾಲಕಿಯರನ್ನು ಕರೆತಂದು ವೇಶ್ಯಾವಾಟಿಕೆಗೆ ಬಳಸಿಕೊಂಡಿರುವುದಾಗಿ ಗೊತ್ತಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಈ ಸಂಬಂಧ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.