ಬೆಂಗಳೂರು | ಪ್ರಾಂಶುಪಾಲರ ಕಿರುಕುಳ ಆರೋಪ : ತರಗತಿ ಕೊಠಡಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪ್ರಾಧ್ಯಾಪಕಿ

Update: 2024-10-14 16:46 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಪ್ರಾಧ್ಯಾಪಕಿಯೊಬ್ಬರು ತರಗತಿ ಕೊಠಡಿಯಲ್ಲೇ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಲ್ಲಿನ ತಿಲಕ್ ನಗರದ ಖಾಸಗಿ ಪಿಯು ಕಾಲೇಜಿನಲ್ಲಿ ಸೋಮವಾರ ವರದಿಯಾಗಿದೆ.

ಶಬಾನ(44) ಎಂಬಾಕೆ ಆತ್ಮಹತ್ಯೆಗೆ ಯತ್ನಿಸಿದ ಇಂಗ್ಲಿಷ್ ಪ್ರಾಧ್ಯಾಪಕಿ ಎಂದು ಗುರುತಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರ ಕಿರುಕುಳಕ್ಕೆ ಬೇಸತ್ತು ಪ್ರಾಧ್ಯಾಪಕಿಯು ಆತ್ಮಹತ್ಯೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ.

ಅ.14ರ ಸೋಮವಾರದಂದು ಕಾಲೇಜಿಗೆ ಬಂದಿದ್ದ ಶಬಾನ ಬೆಳಗ್ಗೆ ಪ್ರಾಂಶುಪಾಲರ ಕೊಠಡಿಗೆ ತೆರಳಿ ಮಾತನಾಡಿ ಹೊರಬಂದಿದ್ದರು. ಇದಾದ ಕೆಲ ಹೊತ್ತಿನ ಬಳಿಕ ತರಗತಿ ಕೊಠಡಿಯಲ್ಲಿಯೇ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾ‌ರೆ ಎನ್ನಲಾಗಿದೆ. ಅಸ್ವಸ್ಥಗೊಂಡ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.

ಕಾಲೇಜಿಗೆ ತಿಲಕ್ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಿಂದ ದೊರೆತ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News