ಬೆಂಗಳೂರು | ಟೆಕ್ಕಿ ಆತ್ಮಹತ್ಯೆ ಪ್ರಕರಣ : ಎಫ್‍ಐಆರ್ ದಾಖಲಿಸಿದ ಪೊಲೀಸರು
ಬೆಂಗಳೂರು :ಪತ್ನಿ ಕಿರುಕುಳದಿಂದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ಸಂಬಂಧ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನನ್ವಯ ಮಾರತ್ ಹಳ್ಳಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 108 (ಆತ್ಮಹತ್ಯೆಗೆ ಪ್ರಚೋದನೆ) ಆರೋಪದಡಿ ಮೊಕದ್ದಮೆ ದಾಖಲಾಗಿದೆ.
ಅತುಲ್ ಸುಭಾಷ್, ನಿಕಿತಾ ಸಿಂಘಾನಿಯಾಗೆ 2019ರಲ್ಲಿ ಮದುವೆಯಾಗಿತ್ತು. ದಂಪತಿಗೆ 4 ವರ್ಷದ ಗಂಡು ಮಗು ಸಹ ಇದೆ. ಆದರೆ ತನ್ನ ತಾಯಿ ಹಾಗೂ ಸಹೋದರನ ಕುಮ್ಮಕ್ಕಿನಿಂದ ಪತಿ ಅತುಲ್ ಸುಭಾಷ್ ವಿರುದ್ಧ ನಿಕಿತಾ ಸುಳ್ಳು ದೂರು ದಾಖಲಿಸಿದ್ದಳು ಎಂದು ಆರೋಪಿಸಲಾಗಿದೆ. ಆರೋಪಿಗಳು ಅತುಲ್ ಸುಭಾಷ್‌ಗೆ ಪುತ್ರನ ಭೇಟಿಗೂ ಅವಕಾಶ ನೀಡದೆ 30 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು ಎಂದು ದೂರಲಾಗಿದೆ.
ಅಲ್ಲದೆ ಪ್ರಕರಣದ ನ್ಯಾಯಾಲಯದ ಕಲಾಪಗಳಿಗೆ ಅತುಲ್ ಸುಭಾಷ್ ಹಾಜರಾದ ಸಂದರ್ಭದಲ್ಲಿ '3 ಕೋಟಿ ರೂ. ಕೊಡು, ಇಲ್ಲದಿದ್ದರೆ ಬದುಕಿರಬೇಡ' ಎಂದು ಅಣಕಿಸುತ್ತಿದ್ದರು. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದು ಅತುಲ್ ಸುಭಾಷ್ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬಿಕಾಸ್ ಕುಮಾರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮೃತನ ಸಹೋದರನ ದೂರಿನನ್ವಯ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಡಾ.ಶಿವಕುಮಾರ್ ಗುಣಾರೆ ತಿಳಿಸಿದರು.