ತುಮಕೂರಿನಲ್ಲಿ ಪತ್ರಕರ್ತರ ಸಮ್ಮೇಳನ : ಲಾಂಛನ ಬಿಡುಗಡೆ ಮಾಡಿದ ಸಿಎಂ

Update: 2024-12-22 13:30 GMT

ಬೆಂಗಳೂರು: ಕಲ್ಪತರ ನಾಡು ತುಮಕೂರಿನಲ್ಲಿ ಜ.18ಮತ್ತು 19ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.

ರವಿವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕೆಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವ ಡಾ.ಪರಮೇಶ್ವರ್ ಅವರು ಆಹ್ವಾನಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಳೆದ ಬಾರಿಯೂ ನಾನು ಪತ್ರಕರ್ತರ ಸಮ್ಮೇಳನ ಉದ್ಘಾಟನೆಗೆ ಬಂದಿದ್ದೇನೆ. ಈ ಬಾರಿಯೂ ಬರುತ್ತೇನೆ. ಸಮ್ಮೇಳನಕ್ಕೆ ಅಗತ್ಯವಾದ ಸಹಕಾರ ನೀಡುತ್ತೇನೆ ಎಂದು ತಿಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಡಿಸೆಂಬರ್‌ನಲ್ಲಿ ಸಮ್ಮೇಳನ ಮಾಡಲು ಉದ್ದೇಶಿಸಲಾಗಿತ್ತು. ತಾವು ನೀಡಿದ ಸಲಹೆ ಹಿನ್ನೆಲೆಯಲ್ಲಿ ಜನವರಿ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಯಿತು ಎಂದು ಹೇಳಿದಾಗಲೂ ಪ್ರತಿಕ್ರಿಯಿಸಿದ ಸಿಎಂ, ಪತ್ರಕರ್ತರ ಸಮ್ಮೇಳನ ಚೆನ್ನಾಗಿ ಆಯೋಜಿಸಿ, ಚರ್ಚೆಗಳಾಗಲಿ ಖಂಡಿತವಾಗಿ ಬರುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಆಹ್ವಾನಿಸಲಾಯಿತು. ಈ ವೇಳೆ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಶೋತ್ತಮ್, ಪ್ರಧಾನ ಕಾರ್ಯದರ್ಶಿ ರಘುರಾಮ್, ರಾಷ್ಟ್ರೀಯ ಮಂಡಳಿ ಸದಸ್ಯರಾದ ಡಿ.ಎಂ.ಸತೀಶ್, ಟಿ.ಎನ್.ಮಧುಕರ್, ಅನು ಶಾಂತರಾಜು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News