ಇಲಾಖಾ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಭೋಸರಾಜು ಸೂಚನೆ
ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ಅಡಿಯಲ್ಲಿ ಕೈಗೊಳ್ಳಲಾಗಿರುವಂತಹ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವ ಮೂಲಕ ರಾಜ್ಯದ ರೈತರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಯೋಜನೆಗಳಿಂದ ರೈತರು ಹೆಚ್ಚಿನ ಲಾಭ ಪಡೆಯುತ್ತಾರೆ. ಈ ಯೋಜನೆಗಳನ್ನು ಗುಣಮಟ್ಟವನ್ನು ಖಾತ್ರಿ ಪಡಿಸಿಕೊಂಡು, ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವುದು ಬಹಳ ಮುಖ್ಯ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಸರಿಯಾದ ಗುಣಮಟ್ಟ ಹಾಗೂ ಸಮಯದಲ್ಲಿ ಕಾಮಗಾರಿ ಕೈಗೊಳ್ಳದೇ ಇರುವವರ ಮೇಲೆ ಕ್ರಮ ಕೈಗೊಂಡು ಕಾರ್ಯದರ್ಶಿಗಳಿಗೆ ವರದಿ ಸಲ್ಲಿಸಬೇಕು. ಇಲ್ಲದೇ ಇದ್ದ ಸಂದರ್ಭದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕಾರ್ಯದರ್ಶಿಗಳಿಗೆ ಎನ್.ಎಸ್.ಭೋಸರಾಜು ಸೂಚನೆ ನೀಡಿದರು.
ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯ ಕಾರ್ಯದರ್ಶಿ ರಾಘವನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.