ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ: ಹೆಬ್ಬಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಬಂಧನ
ಬೆಂಗಳೂರು, ನ.15: ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಒಳಸಂಚು ರೂಪಿಸಿದ್ದ ಆರೋಪದಡಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿಯ ವಿಶೇಷ ತನಿಖಾ ದಳದ(ಎಸ್‌ಐಟಿ) ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಐಯಣ್ಣ ರೆಡ್ಡಿ ಅವರನ್ನು ವಶಕ್ಕೆ ಪಡೆದ ಎಸ್‌ಐಟಿ ತನಿಖಾಧಿಕಾರಿಗಳು ಬಳಿಕ ಬಂಧಿಸಿದರು.
ಆರೋಪಿಗಳು ನಡೆಸುತ್ತಿದ್ದ ಹನಿಟ್ರ್ಯಾಪ್‌ಗೆ ಇನ್‌ಸ್ಪೆಕ್ಟರ್ ನೆರವು ನೀಡಿದ್ದರು. ಅಲ್ಲದೇ ಆರೋಪಿಗಳು ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದು ಗೊತ್ತಿದ್ದರೂ ಇನ್ಸ್‌ಪೆಕ್ಟರ್ ಮಾಹಿತಿ ಬಚ್ಚಿಟ್ಟಿದ್ದರೆಂಬ ಆರೋಪದಡಿ ಬಂಧಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಐಯಣ್ಣ ರೆಡ್ಡಿ ಕಳೆದ ಒಂದೂವರೆ ವರ್ಷದಿಂದ ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಮುನಿರತ್ನ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಹೆಚ್ಚಿನ ವರ್ಷ ಕೆಲಸ ಮಾಡಿದ್ದರು ಎನ್ನಲಾಗಿದೆ.