ಬಿಜೆಪಿಯವರದ್ದು ಡೋಂಗಿ ಹಿಂದುತ್ವ: ಸಿಎಂ ಸಿದ್ದರಾಮಯ್ಯ

Update: 2023-12-28 09:00 GMT

ಬೆಂಗಳೂರು, ಡಿ.28: ಬಿಜೆಪಿ, ಜನ ಸಂಘ, ಆರೆಸ್ಸೆಸ್ ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ ಆರೆಸ್ಸೆಸ್ ಹುಟ್ಟಿತ್ತು. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಗೀತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಭಾರತ್ ಜೋಡೋ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಹಿಂದೂ ಬೇರೆ- ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸುವುದಿಲ್ವ? ನಮ್ಮೂರುಗಳಲ್ಲಿ ರಾಮಮಂದಿರಗಳನ್ನು ಕಟ್ಟಿಲ್ವ, ರಾಮನ ಭಜನೆ ಮಾಡುವುದಿಲ್ವ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ವ್ಯಂಗ್ಯವಾಡಿದರು.

ನೆಹರೂ -ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ದೇಶದ ನೇತೃತ್ವ ವಹಿಸುತ್ತಾರೆ. ಪ್ರಧಾನಿ ಆಗುತ್ತಾರೆ ಎಂದು ಸಿದ್ದರಾಮಯ್ಯ ನುಡಿದರು.

ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವಧಿಯಲ್ಲಿ. ಬಿಜೆಪಿಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.

ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News