5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ : ರಾಜ್ಯ ಸರಕಾರದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

Update: 2024-03-14 18:00 GMT

ಬೆಂಗಳೂರು: ರಾಜ್ಯದಲ್ಲಿ 5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಕುರಿತು ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಕುರಿತು ರಾಜ್ಯ ಸರಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ರಾಜೇಶ್ ಕೆ ರೈ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ಈ‌ ವೇಳೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವಕೀಲರು, ಸರಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ಮನವಿ ಮಾಡಿದರು. ಆದರೆ ಈ ವಾದವನ್ನು ತಿರಸ್ಕರಿಸಿದ ಪೀಠ, ಮಧ್ಯಂತರ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ನ್ಯಾಯಪೀಠ, ಮೇಲ್ಮನವಿಯನ್ನು ವಿಭಾಗೀಯ ಪೀಠ ವಿಚಾರಣೆ ನಡೆಸಿ ಆದಷ್ಟು ಶೀಘ್ರದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸುವಂತೆ ತಿಳಿಸಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿತು.

ಇದೇ ಸಂದರ್ಭದಲ್ಲಿ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ವಿದ್ಯಾರ್ಥಿಗಳು ಮತ್ತು ಪೋಷಕರ ಪರವಾಗಿ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಜತೆಗೆ, ಪರೀಕ್ಷೆ ನಡೆಸದಂತೆ ಮತ್ತೊಂದು ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆ ನಡೆಸಬೇಕಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗ ಪರ ವಕೀಲರು ವಾದ ಮಂಡಿಸಿ, ಸರಾಕಾರ ನಡೆಸುವುದಕ್ಕೆ ಮುಂದಾಗಿರುವ ಪರೀಕ್ಷಾ ಕ್ರಮದ ಗೊಂದಲಗಳು ಮಕ್ಕಳ ಮೇಲ ಪರಿಣಾಮ ಬೀರಬಹುದಾಗಿದೆ. ಸರಕಾರದ ಈ ಸುತ್ತೋಲೆ ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್ 22ಕ್ಕೆ ಸೀಮಿತವಾಗಿಲ್ಲ. ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಅಲ್ಲದೆ, ಸರಕಾರದ ಸುತ್ತೋಲೆಗಳನ್ನು ಸುಪ್ರೀಂಕೋರ್ಟ್ ಕಾನೂನು ಬಾಹಿತ ಎಂಬುದಾಗಿ ಘೋಷಿಸಿ ರದ್ದುಪಡಿಸಿದೆ. ಹೀಗಾಗಿ ಸುತ್ತೋಲೆ ರದ್ದುಪಡಿಸಿರುವ ಕ್ರಮ ಸರಿಯಾಗಿದೆ ಎಂದು ಪೀಠಕ್ಕೆ ವಿವರಿಸಿದರು.

ಸರಕಾರದ ಪರವಾಗಿ ವಾದ ಮುಂದುವರೆಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ಅರ್ಜಿದಾರರ ವಾದವು ವಿನಾಕಾರಣ ಎಳೆದುಕೊಂಡು ಹೋಗುವುದಾಗಿದೆ. ಜತೆಗೆ, ವಿಳಂಬಕ್ಕೆ ಕಾರಣವಾಗಲಿದೆ. ಅಲ್ಲದೆ, ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್ ಪ್ರಕಾರ ರಾಜ್ಯ ಸರ್ಕಾರಕ್ಕೆ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶವಿದೆ. ಅದರಂತೆ ಪರೀಕ್ಷೆಗಳಿಗೆ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ವಾದ ಪ್ರತಿವಾದ ಆಲಿಸಿದ ಪೀಠ ಮೇಲಿನ ಆದೇಶ ಮಾಡಿದೆ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News