ಮೂರು ಕ್ಷೇತ್ರಗಳ ‘ಉಪಚುನಾವಣೆ’ : ನ.23ಕ್ಕೆ ಫಲಿತಾಂಶ
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ (ನ.23) ನಡೆಯಲಿದ್ದು, ಗೆಲುವು-ಸೋಲಿನ ಲೆಕ್ಕಚಾರ ಆರಂಭವಾಗಿದೆ.
ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದರೂ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸೇರಿದಂತೆ ಮೂರು ಪಕ್ಷಗಳ ಅಭ್ಯರ್ಥಿಗಳು ಗೆಲುವಿನ ಉತ್ಸಾಹದಲ್ಲಿದ್ದಾರೆ. ಮೂರು ಕ್ಷೇತ್ರಗಳಿಗೆ ನ.13ರಂದು ಮತದಾನ ನಡೆದಿತ್ತು. ನ.23ರ ಬೆಳಗ್ಗೆ 8ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ.
ತೀವ್ರ ಪೈಪೋಟಿ ಸೃಷ್ಟಿಸಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‍ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆಂಬ ಸಮೀಕ್ಷೆ ಹೇಳಿದ್ದು, ಜೆಡಿಎಸ್ ಪಾಳಯದಲ್ಲಿ ಉತ್ಸಾಹ ಮನೆ ಮಾಡಿದೆ. ಆದರೆ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದಲ್ಲಿ ಸಂಸದ ಇ.ತುಕಾರಾಂ ಪತ್ನಿ, ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಗೆಲುವಿನ ವಿಶ್ವಾಸದಲ್ಲಿದ್ದು, ಬಿಜೆಪಿಯ ಅಭ್ಯರ್ಥಿ ಬಂಗಾರು ಹನುಮಂತು ಪ್ರಬಲ ಪೈಪೋಟಿ ನೀಡಿದ್ದರೂ, ಬಿಜೆಪಿಯ ಆಂತರಿಕ ಕಚ್ಚಾಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಲಿದೆ ಎಂದು ಹೇಳಲಾಗುತ್ತಿದೆ.
ಇನ್ನೂ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಕ್ಷೇತ್ರದಲ್ಲಿಯೂ ಬಿಜೆಪಿಯ ಭರತ್ ಬೊಮ್ಮಾಯಿ ಹಾಗೂ ಕಾಂಗ್ರೆಸ್‍ನ ಯಾಸಿರ್ ಅಹ್ಮದ್ ಖಾನ್ ಪಠಾಣ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿಯೂ ಸಿಎಂ, ಡಿಸಿಎಂ, ಕೇಂದ್ರ ಹಾಗೂ ರಾಜ್ಯ ಸಚಿವರು, ಮಾಜಿ ಪ್ರಧಾನಿ, ಮಾಜಿ ಸಿಎಂಗಳು ಸಹಿತ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದು, ಆರೋಪ-ಪ್ರತ್ಯಾರೋಪಗಳ ಭರಾಟೆಯೂ ಜೋರಾಗಿತ್ತು. ಹೀಗಾಗಿ ಯಾರಿಗೆ ವಿಜಯಮಾಲೆ ಎಂಬ ಕುತೂಹಲ ಮೂಡಿಸಿದೆ.