ಎ.15, ಎ.16, ಎ.17ರಂದು 775 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‍ಗಳ ಪ್ರವೇಶಕ್ಕೆ ನಡೆಸುವ 2025ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯು(ಸಿಇಟಿ) ಎ.15, ಎ.16 ಮತ್ತು ಎ.17 ರಂದು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಗೆ 3.31 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ನಾಳೆ(ಎ.15) ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಎ.16ರಂದು ಭೌತ ವಿಜ್ಞಾನ ಮತ್ತು ರಸಾಯನಶಾಸ್ತ್ರ ಹಾಗೂ ಎ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಪೊಲೀಸ್/ ಗೃಹ ರಕ್ಷಕ ದಳದ ಸಿಬ್ಬಂದಿ ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರದೊಳಗೆ ಬಿಡಲಾಗುತ್ತದೆ. ಹೀಗಾಗಿ ಕನಿಷ್ಠ ಒಂದೂವರೆ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬಂದು ತಪಾಸಣೆಗೆ ಒಳಗಾಗಬೇಕು. ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.
ಯಾರದ್ದೊ ಪರೀಕ್ಷೆಯನ್ನು ಇನ್ಯಾರೊ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಿದ್ದು, ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿಯೂ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ ಮಾಡಿಲಾಗಿದೆ. ಈ ಮೂಲಕ ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ.
ವಸ್ತ್ರ ಸಂಹಿತೆ:
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ ಮಾಡಿದ್ದು, ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು. ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ. ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು. ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇರುವುದಿಲ್ಲ. ಶೂ ಧರಿಸುವುದನ್ನು ನಿಷೇಧಿಸಲಾಗಿದೆ.
ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಒಮ್ಮೆ ಕೆಇಎ ವೆಬ್ ಸೈಟ್ ನಲ್ಲಿ ಇರುವ ವಸ್ತ್ರ ಸಂಹಿತೆಯ ವಿವರಗಳನ್ನು ಓದಿಕೊಂಡು, ಆ ಪ್ರಕಾರ ಪರೀಕ್ಷೆಗೆ ಬರಬೇಕು ಎಂದು ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ನೇಮಕಾತಿ ಪರೀಕ್ಷೆಗಳಿಗೆ ಮಾಡುವ ಹಾಗೆ ಈ ಪರೀಕ್ಷೆಗೂ ಕ್ಯಾಮರಾ ಕಣ್ಗಾವಲು ಇರುತ್ತದೆ. ವೆಬ್ ಕಾಸ್ಟಿಂಗ್ ಮೂಲಕ ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ ಮಾಡಿದ್ದು, ಕಟ್ಟೆಚ್ಚರವಹಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ.
-ಎಚ್.ಪ್ರಸನ್ನ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ