ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಗುಜರಾತ್‍ಗೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆ(ನವ ಸತ್ಯಾಗ್ರಹ ಬೈಠಕ್)ಯಲ್ಲಿ ಪಾಲ್ಗೊಳ್ಳಲು ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಜರಾತ್‍ಗೆ ಪ್ರಯಾಣ ಬೆಳೆಸಿದ್ದಾರೆ.
ಅಹಮದಾಬಾದ್‍ನ ಸಬರಮತಿಯಲ್ಲಿ ಮಂಗಳವಾರ ಜರುಗಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅವರು ಅಹಮದಾಬಾದ್‍ಗೆ ತೆರಳಿದರು.
ಬುಧವಾರ ಸಬರಮತಿಯಲ್ಲೆ ನಡೆಯಲಿರುವ ಎಐಸಿಸಿ ಸದಸ್ಯರ ಸಭೆಯಲ್ಲೂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಆನಂತರ ಅಂದು ಸಂಜೆ 6 ಗಂಟೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಕಳೆದ ಸಾಲಿನ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಗುಜರಾತ್‍ನಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.