ಚಿಕ್ಕಮಗಳೂರು | ಕೊಲ್ಕತ್ತಾ ಯುವವೈದ್ಯೆ ಅತ್ಯಾಚಾರ ಖಂಡಿಸಿ ವೈದ್ಯರಿಂದ ಶಾಂತಿಯುತ ಪ್ರತಿಭಟನೆ

Update: 2024-08-17 13:18 GMT

ಚಿಕ್ಕಮಗಳೂರು : ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಯುವ ವೈದ್ಯೆಯ ಅತ್ಯಾಚಾರ ಘಟನೆ ಖಂಡಿಸಿ ದೇಶಾದ್ಯಂತ ಐಎಂಎ ಕರೆ ನೀಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾದ್ಯಂತ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಸ್ಥಗಿತಗೊಳಿಸಿ ವೈದ್ಯರು ಕಪ್ಪುಪಟ್ಟಿ ಧರಿಸಿ ಸಾಂಕೇತಿಕವಾಗಿ ಶಾಂತಿಯುವ ಪ್ರತಿಭಟನೆ ನಡೆಸಿದರು.

ಯುವ ವೈದ್ಯೆಯ ಅತ್ಯಾಚಾರ ಘಟನೆ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‍ನ ಜಿಲ್ಲಾ ಘಟಕ ಜಿಲ್ಲಾದ್ಯಂತ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಲು ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಎಲ್ಲ ಖಾಸಗಿ ಆಸ್ಪತ್ರೆಗಳು ಬೆಳಗ್ಗೆಯಿಂದ ಸಂಜೆವರೆಗೆ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆಸ್ಪತ್ರೆಯಲ್ಲಿ ಓಪಿಡಿ ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸಾರ್ವಜನಿಕರಿಲ್ಲದೇ ಬಿಕೋ ಎನ್ನುತ್ತಿದ್ದವು.

ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರಿಂದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಸಿಗದೇ ಪರದಾಡುವಂತಾಗಿತ್ತು. ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರ ಸಂಖ್ಯೆ ಶನಿವಾರ ಅತ್ಯಂತ ವಿರಳವಾಗಿತ್ತು. ತುರ್ತು ಸೇವೆಗಳ ಆವಶ್ಯಕತೆ ಇದ್ದವರಿಗೆ ವೈದ್ಯರು ಮತ್ತು ಸಿಬ್ಬಂದಿ ವೈದ್ಯಕೀಯ ಸೇವೆ ನೀಡುತ್ತಿದ್ದ ದೃಶ್ಯಗಳು ಎಲ್ಲ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿದ್ದವು. ನಗರ ಹಾಗೂ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿದ್ದ ಬಹುತೇಕ ಕ್ಲಿನಿಕ್‍ಗಳನ್ನು ಮುಚ್ಚಲಾಗಿತ್ತು. ಗ್ರಾಮೀಣ ಭಾಗದ ಸರಕಾರಿ ಆಸ್ಪತ್ರೆಗಳಲ್ಲೂ ಸಾರ್ವಜನಿಕರ ಸಂಖ್ಯೆ ಕಡಿಮೆ ಇತ್ತು.

ಪ್ರತಿಭಟನೆ ಹಿನ್ನೆಲೆಯಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಡಾ.ಚೈತನ್ಯ ಸವೂರ್, ಉಪಾಧ್ಯಕ್ಷ ಹಾಗೂ ಜಿಲ್ಲಾ ಸರ್ಜನ್ ಡಾ.ಮೋಹನ್‍ಕುಮಾರ್, ಕಾರ್ತಿಕ ವಿಜಯ್, ಖಜಾಂಚಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್‍ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಾಂಕೇತಿಕವಾಗಿ ಧರಣಿ ನಡೆಸಿದರು. ನಂತರ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಶಿರಸ್ತೇದಾರ್ ಹೇಮಂತ್ ಅವರ ಮೂಲಕ ರಾಷ್ಟ್ರಪತಿ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ, ಯುವ ವೈದ್ಯೆಯ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು.

ಮನವಿ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಐಎಂಎ ಜಿಲ್ಲಾಧ್ಯಕ್ಷ ಚೈತನ್ಯ ಸವೂರ್, ಕೊಲ್ಕತ್ತಾದಲ್ಲಿ ಕರ್ತವ್ಯನಿರತ ವೈದ್ಯೆ ಮೇಲೆ ನಡೆದಿರುವ ಪೈಶಾಚಿಕ ಕೃತ್ಯ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇಂತಹ ವಿಕೃತ ಮನಸ್ಸಿನ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಮೂಲಕ ವೈದ್ಯ ಸಮೂಹಕ್ಕೆ ಸರಕಾರಗಳು ರಕ್ಷಣೆ ನೀಡಬೇಕು ಎಂದರು.

ಸಂಘದ ಜಿಲ್ಲಾಉಪಾಧ್ಯಕ್ಷ ಡಾ.ಉಮೇಶ್ ಹಾಗೂ ಪದಾಧಿಕಾರಿಗಳಾದ ಡಾ.ಸಂತೋಷ್ ಅರಸ್, ಡಾ.ಕೌಶಿಕ್ ಸಾರಗೋಡು, ಡಾ.ಗೀತಾ, ಡಾ.ಸೌಮ್ಯಾ ಸುನಿಲ್ ಸೇರಿದಂತೆ ನೂರಾರು ಸರಕಾರಿ, ಖಾಸಗಿ ಆಸ್ಪತ್ರೆಗಳ ವೈದ್ಯರು ಈ ವೇಳೆ ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News