ಎಷ್ಟೇ ಪ್ರಭಾವಿಗಳಾಗಿದ್ದರೂ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Update: 2024-05-22 13:54 GMT

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಾಜಕಾಲುವೆ ಒತ್ತುವರಿಯಾಗಿದ್ದರೆ, ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ 400 ಕೆರೆಗಳಿದ್ದವು. ಈಗ ಅನೇಕ ಕೆರೆಗಳು ಹೂಳಿನಿಂದ ತುಂಬಿದೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೆಯೇ ಕೆರೆಗಳಿಂದ ತೆಗೆಯಲಾಗುವ ಹೂಳನ್ನು ಗುರುತು ಮಾಡಿರುವ ಸ್ಥಳಗಳಲ್ಲಿ(ಕ್ವಾರಿಗಳಿಗೆ) ಹಾಕಲಾಗುತ್ತಿದೆ ಎಂದರು.

ಜೂನ್‍ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಅದರಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದರು. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಹೆಚ್ಚಾದಾಗ ನೀರು ಹರಿಯಲು ಸಾಧ್ಯವಾಗದಂತೆ ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು. ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದು ಅವರು ಮಾಹಿತಿ ನೀಡಿದರು.

ಹಿಂದಿನ ಸರಕಾರ ಜನವರಿ 2023ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೂ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂ. ನೀಡಲಿದೆ. ರಾಜಕಾಲುವೆ ಒತ್ತುವರಿ ಕುರಿತಾಗಿ 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು ಎಂದು ಅವರು ನುಡಿದರು.

ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಒಂದು ತಿಂಗಳಲ್ಲಿ ರಸ್ತೆಗುಂಡಿಗಳನ್ನು ಭರ್ತಿ ಮಾಡಿ: ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಲಾಗಿದೆ. ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್ ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪೋನ್ ಅನ್ನು ಟ್ಯಾಪಿಂಗ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಆದರೆ ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದಿಲ್ಲ. ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಮರೆಮಾಚಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.

- ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News