ಹಿರಿಯ ನಾಗರಿಕರಿಗೆ ಮಾಸಾಶನ ಪರಿಷ್ಕರಿಸಲು ತೀರ್ಮಾನ : ಸಿಎಂ ಸಿದ್ದರಾಮಯ್ಯ

Update: 2024-10-01 12:28 GMT

ಬೆಂಗಳೂರು : ರಾಜ್ಯದಲ್ಲಿ ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದ್ದು, ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಷ್ಕರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2024’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಸುಮಾರು 57.91ಲಕ್ಷದಷ್ಟು ಹಿರಿಯ ನಾಗರಿಕರಿದ್ದಾರೆ. ಮಕ್ಕಳು ವಿದೇಶದಲ್ಲಿ ನೆಲಿಸಿ, ತಂದೆತಾಯಿಯನ್ನು ಪೋಷಿಸಲು ಸಾಧ್ಯವಾಗದೆ ವೃದ್ಧಾಶ್ರಮಗಳಿಗೆ ಸೇರಿಸುತ್ತಿರುವ ಪ್ರವೃತ್ತಿ ಹೆಚ್ಚುತ್ತಿದೆ ಎಂದರು.

ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ. ಹಿರಿಯರ ಬದುಕನ್ನು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ. ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ ನೀಡಲೆಂಬ ಸದುದ್ಧೇಶದಿಂದ ಹಿರಿಯ ನಾಗರಿಕನ್ನು ಗೌರವಿಸಿ ಸನ್ಮಾನಿಸಲಾಗುತ್ತದೆ ಎಂದು ಅವರು ತಿಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಅರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

2024-25ನೆ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರಕಾರ 10.47 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಿದೆ. ಈ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಸ್ವಯಂಸೇವಾ ಸಂಸ್ಥೆಗಳ ಮೂಲಕ ರಾಜ್ಯದೆಲ್ಲೆಡೆ 63 ವೃದ್ಧಾಶ್ರಮಗಳನ್ನು ತೆರೆದಿದ್ದು, ಸದ್ಯ 1,575 ಮಂದಿ ಅಶಕ್ತ ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅವರು ತಿಳಿಸಿದರು.

ಸಹಾಯವಾಣಿ ಸಿಬ್ಬಂದಿಗೆ ಗೌರವ ಧನ ಹೆಚ್ಚಳ: ಹಿರಿಯ ನಾಗರಿಕರಿಗಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸಹಾಯವಾಣಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಸಿಬ್ಬಂದಿಗೆ ಶೇ.50ರಷ್ಟು ಗೌರವಧನ ಹೆಚ್ಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌  ಹೇಳಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಇಲಾಖಾ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News