ಪ್ರಾಸಿಕ್ಯೂಷನ್‍ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಭಾರೀ ಪ್ರತಿಭಟನೆ

Update: 2024-08-17 14:23 GMT

ಬೆಂಗಳೂರು : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯಪಾಲರ ನಡೆಯನ್ನು ಖಂಡಿಸಿ ನಗರದ ರಾಜಭವನ, ಕಾಂಗ್ರೆಸ್ ಕಚೇರಿ ಸೇರಿ ವಿವಿಧೆಡೆಗಳಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರು ರಾಜ್ಯಪಾಲರು ಹಾಗೂ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುವ ಜೊತೆಗೆ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದ್ದರಿಂದಾಗಿ ನಗರದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಬ್ಯಾರಿಕೇಡ್‍ಗಳನ್ನು ಹಾಕಿ ಕಾರ್ಯಕರ್ತರು, ರಾಜಭವನದ ಬಳಿ ಬರುವುದನ್ನು ತಡೆದು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು.

ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅವರನ್ನು ಕೂಡಲೇ ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ರಾಜ್ಯಪಾಲರ ಪೂರ್ವಾನುಮತಿ ಕುರಿತು ಮಾತನಾಡಿದ ಪರಿಷತ್ ಸದಸ್ಯ ಡಾ.ತಿಮಯ್ಯ, ‘ಕೇಂದ್ರದ ಸರಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಎಳ್ಳಷ್ಟೂ ಇಲ್ಲ. ಈ ಪ್ರಕರಣದಿಂದ ನಿರ್ದೋಷಿಗಳಾಗಿ ಹೊರ ಬರುವ ವಿಶ್ವಾಸವಿದೆ. ಒಂದು ವೇಳೆ ಸಿಎಂ ಬಂಧನವೇನಾದರೂ ಆದರೆ, ರಕ್ತ ಕ್ರಾಂತಿ ನಡೆದುಹೋಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಬಿಗಿ ಪೊಲೀಸ್ ಬಂದೋಬಸ್ತ್: ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರಿಂದ ಅನುಮತಿ ದೊರೆತಿರುವ ಬೆನ್ನಲ್ಲೇ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ನಗರದ ರಾಜಭವನ, ವಿಧಾನಸೌಧ, ವಿಕಾಸಸೌಧ, ಸಿಎಂ ಗೃಹ ಕಚೇರಿ ಕೃಷ್ಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿಎಆರ್ ಹಾಗೂ ಕೆಎಸ್‍ಆರ್‍ಪಿ ತುಕಡಿಗಳನ್ನು ಸ್ಥಳೀಯ ಪೊಲೀಸರ ಜೊತೆ ನಿಯೋಜಿಸುವ ಮೂಲಕ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News