ಮಾನವಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು
ಬೆಂಗಳೂರು: ವಿಧಾನಪರಿಷತ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು, ಪ್ರತಿದೂರುಗಳು ದಾಖಲಾಗುತ್ತಲೇ ಇವೆ. ಇದೀಗ ಸಿಟಿ ರವಿ ಡಿ.19ರಂದು ಬೆಳಗಾವಿಯಲ್ಲಿ ತಮ್ಮ ಬಂಧನದ ವೇಳೆ ಪೊಲೀಸ್ ದೌರ್ಜನ್ಯ ನಡೆದಿದ್ದು, ಇದರಲ್ಲಿ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ 13 ಪುಟಗಳ ದೂರನ್ನು ಇ-ಮೇಲ್ ಮೂಲಕ ರಾಷ್ಟ್ರೀಯ ಮಾನವಹಕ್ಕುಗಳ ಆಯೋಗಕ್ಕೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್ ಮೂಲಕ 13 ಪುಟಗಳ ದೂರನ್ನು ಸಿಟಿ ರವಿ ಸಲ್ಲಿಸಿದ್ದು, ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿಯಾಗಿದ್ದು, ನಕಲಿ ಎನ್‍ಕೌಂಟರ್‌ಗೆ ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಿದ್ದಾರೆ.
ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಆಪ್ತರು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರು ಕೂಡ ಉಲ್ಲೇಖಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.