ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಸಂಕಲ್ಪ: ಡಿ.ಕೆ.ಶಿವಕುಮಾರ್
ಬೆಂಗಳೂರು: ‘ರಾಮನಗರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ರಾಮನಗರ ಜಿಲ್ಲೆಗೆ ಕೆಎಸ್ಸಾರ್ಟಿಸಿ ನೂತನ ಅಶ್ವಮೇಧ ಬಸ್‍ಗಳ ಸಂಚಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್, ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಮಾಡಲು ಡಿ.ಕೆ.ಸುರೇಶ್ ಸಂಕಲ್ಪ ಮಾಡಿದ್ದಾರೆ. ಅವರ ಯೋಜನೆಗಳನ್ನು ಜಾರಿಗೊಳಿಸಲು ನಾನು, ಇಕ್ಬಾಲ್ ಹುಸೇನ್, ಬಾಲಕೃಷ್ಣ, ರವಿ ಸಂಪೂರ್ಣ ಸಹಕಾರ ನೀಡುತ್ತೇವೆ’ ಎಂದರು.
‘ಬಿಡದಿ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪರಿವರ್ತಿಸುತ್ತಿದ್ದೇವೆ. ಬಿಡದಿ ಹಾಗೂ ಆನೇಕಲ್ ವರೆಗೂ ಮೆಟ್ರೋ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ರಾಮನಗರ ಜಿಲ್ಲೆಗೆ ಯಾವ ಯಾವ ಇಲಾಖೆಗಳಲ್ಲಿ ಏನೆಲ್ಲಾ ಯೋಜನೆಗಳನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ತಿಳಿಸುತ್ತೇನೆ ಎಂದು ಅವರು ತಿಳಿಸಿದರು.
ಜಿಲ್ಲೆಯವರು ಬೆಂಗಳೂರಿನವರೇ ಆಗಿದ್ದಾರೆ. ಕೆಂಗಲ್ ಹನುಮಂತಯ್ಯ, ಬಾಲಗಂಗಾಧರನಾಥ ಸ್ವಾಮಿಜಿ, ಶಿವಕುಮಾರ ಸ್ವಾಮೀಜಿ ಇದೇ ಜಿಲ್ಲೆಯವರು. ನಾವೆಲ್ಲರೂ ಬೆಂಗಳೂರಿನ ಭಾಗ. ಈ ವಿಚಾರವಾಗಿ ಚುನಾವಣೆ ನಂತರ ಚರ್ಚೆ ಮಾಡಿ ರೂಪುರೇಷೆ ನೀಡುತ್ತೇನೆ. ತಮಿಳುನಾಡಿನಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದ್ದರು. ನಮ್ಮ ಸರಕಾರ ಶಕ್ತಿ ಯೋಜನೆ ಮೂಲಕ ಇಡೀ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
‘ಈ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಬರೀದಾಗುತ್ತವೆ ಎಂದು ಹೇಳುತ್ತಿದ್ದರು. ಈಗ ಪ್ರತಿ ತಿಂಗಳು ಮಹಿಳೆಯರ ಪ್ರಯಾಣದ ಹಣವನ್ನು ಸರಕಾರ ಕಟ್ಟುತ್ತಿದೆ. ಬೆಳಗಾವಿ, ಹುಬ್ಬಳ್ಳಿ ಹಾಗೂ ಇತರೆ ಭಾಗದ ಜಿಲ್ಲೆಗಳಿಂದ ಬೆಂಗಳೂರಿಗೆ ಒಂದು ಬಾರಿ ಓಡಾಡಲು 1,500-2ಸಾವಿರ ರೂ.ಬೇಕಾಗುತ್ತದೆ. ಈ ಯೋಜನೆಯಿಂದ ಅವರಿಗೆ ಅಷ್ಟೂ ದುಡ್ಡು ಉಳಿಯುತ್ತದೆ. ಕೆಲಸಕ್ಕೆ ಓಡಾಡುವವರಿಗೂ ಈ ಯೋಜನೆ ಅನುಕೂಲವಾಗಿದೆ ಎಂದು ಅವರು ತಿಳಿಸಿದರು.
ರಾಮಲಿಂಗಾ ರೆಡ್ಡಿ ಸಚಿವರಾಗಿ ಸಾರಿಗೆ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದ್ದಾರೆ. ಸರಕಾರದ ಪ್ರತಿನಿಧಿಯಾಗಿ, ಈ ಭಾಗದ ಶಾಸಕನಾಗಿ ಅವರಿಗೆ ತುಂಬು ಹೃದಯದ ಧನ್ಯವಾದ ಸಲ್ಲಿಸುತ್ತೇನೆ. ರಾಮಲಿಂಗಾ ರೆಡ್ಡಿ ಅವರ ಬಳಿ ಅತ್ಯುತ್ತಮ ಅಧಿಕಾರಿಗಳ ತಂಡವಿದೆ. ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ನುಡಿದರು.
ಬೇರೆ ಸಂಸದರು ಮಾಡಿಲ್ಲ: ಪ್ರತಿಪಕ್ಷಗಳವರು ಏನಾದರೂ ಮಾಡಲಿ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ. ರಾಜಕಾರಣ ಮಾಡುವವರನ್ನು ನಾವು ಬೇಡ ಎನ್ನಲು ಸಾಧ್ಯವೇ? ಈ ಹಿಂದೆಯೂ ಸುರೇಶ್ ಅವರು ಚುನಾವಣೆಗೆ ನಿಂತಾಗ ದಳ ಮತ್ತು ಬಿಜೆಪಿಯವರು ಒಪ್ಪಂದ ಮಾಡಿಕೊಂಡು ಅನಿತಾ ಕುಮಾರಸ್ವಾಮಿಯವರನ್ನು ಮಾತ್ರ ಕಣಕ್ಕಿಳಿಸಿದ್ದರು. ಅವರು ಏನಾದರೂ ರಾಜಕಾರಣ ಮಾಡಲಿ. ರಾಜ್ಯದ 28 ಸಂಸದರ ಪೈಕಿ ಸುರೇಶ್ ಅವರು ಮಾಡಿರುವ ಕೆಲಸ ಬೇರೆ ಯಾವುದೇ ಸಂಸದರು ಮಾಡಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನನ್ನ ವಿರುದ್ಧ ಷಡ್ಯಂತ್ರ: ‘ನನ್ನನ್ನು ಜೈಲಿಗೆ ಕಳುಹಿಸುವುದಾಗಿ ಅನೇಕರು ಮಾತನಾಡಿದ್ದಾರೆ. ಈಶ್ವರಪ್ಪ ಅವರೂ ಮಾತನಾಡಿದ್ದಾರೆ, ನಮ್ಮ ಜಿಲ್ಲೆಯವರೂ ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ. ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಸಿಬಿಐ ಮೂಲಕ ಏನೇನು ಮಾಡಿಸುತ್ತಿದ್ದಾರೆ, ಬೇರೆಯವರ ಮೂಲಕ ಏನು ಮಾಡಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಸಮಯ ಬಂದಾಗ ಮಾತನಾಡುತ್ತೇನೆ’ ಎಂದು ಹೇಳಿದರು.