ಮಹಿಳೆಯರಿಗೆ ಅಪಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ : ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

Update: 2024-04-14 14:22 GMT

ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಹೇಳಿದ್ದೇನೆಯೇ ಹೊರತು ಮಹಿಳೆಯರಿಗೆ ಅಪಮಾನ ಮಾಡುವ ರೀತಿಯಲ್ಲಿ ನಾನು ಮಾತನಾಡಿಲ್ಲ. ಅನಗತ್ಯವಾಗಿ ಕಾಂಗ್ರೆಸ್ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಸೋಲುವ ಹತಾಶೆ ಕಾಂಗ್ರೆಸ್ ಅನ್ನು ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಾನು ಹೇಳಿದ್ದೇ ಬೇರೆ, ಇವರು ತಿರುಚಿ ಹೇಳಿದ್ದೇ ಬೇರೆ. ಗ್ಯಾರಂಟಿಗಳ ಹೆಸರಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಷ್ಟೇ ಹೇಳಿದ್ದೇನೆ. ನಾನು ಮಹಿಳೆಯರನ್ನು ಅವಮಾನ ಮಾಡಿದ್ದೀನಾ? ಖಂಡಿತಾ ಇಲ್ಲ. ಮುಗ್ದ ಜನರನ್ನು, ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ. ನೀವು ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದೇನೆ ಎಂದರು.

ನಾನಾಗಲಿ, ನನ್ನ ಕುಟುಂಬವಾಗಲಿ ಮಹಿಳೆಯರ ಬಗ್ಗೆ ಅಗೌರವದಿಂದ ನಡೆದುಕೊಂಡಿಲ್ಲ. ನಡೆದುಕೊಳ್ಳುವುದೂ ಇಲ್ಲ. ಕಷ್ಟ ಅಂತ ಬಂದಾಗ ನಾನು ನೆರವಾಗಿದ್ದೇನೆ. ಅಧಿಕಾರ ಸಿಕ್ಕಿದಾಗ ಮಹಿಳೆಯರಿಗಾಗಿ ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದೇನೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಮಹಿಳೆಯರ ಕೂಗಿಗೆ ಸ್ಪಂದಿಸಿ ಸಾರಾಯಿ, ಲಾಟರಿ ನಿಷೇಧಿಸಿದ್ದೇನೆ. ನಾನು ಮಹಿಳೆಯರಿಗೆ ನೀಡಿದ ಗೌರವ ಇದು. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವ ವ್ಯಕ್ತಿ ಅಲ್ಲ. ಮಹಿಳೆಯರಿಗೆ ಅವಮಾನ ಆಗುವ ರೀತಿ ಎಲ್ಲೂ ಹೇಳಿಲ್ಲ. ನಾನು ಏನು ಹೇಳಿದ್ದೇನೆ ಎನ್ನುವುದನ್ನು ಅರ್ಥ ಮಾಡಿಕೊಳ್ಳದೇ ಈ ರೀತಿ ಹೇಳುತ್ತಿದ್ದಾರೆ. ರಾಜಕೀಯದಲ್ಲಿ ನನಗೆ ಶಕ್ತಿ ಇದೆ ಅಂದರೆ ಅದು ಮಹಿಳೆಯರಿಂದಲೇ. ಕಾಂಗ್ರೆಸ್ ನಾಯಕರು ನನ್ನ ಮೇಲೆ ತಪ್ಪು ಹೊರೆಸುವ ರೀತಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News