ನೀರಿನಿಂದ ನಾಗರಿಕರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಡಿಸಿಎಂ ಡಿಕೆಶಿ
ಬೆಂಗಳೂರು : ಬೆಂಗಳೂರಿನ ಜನರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಬೇಕು. ಒಂದು ವೇಳೆ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಈ ವಿಚಾರವಾಗಿ ಬಿಬಿಎಂಪಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬೆಂಗಳೂರು ಜಲಮಂಡಳಿ ಮುಖ್ಯಸ್ಥರಿಗೆ ಪತ್ರ ಬರೆದಿರುವ ಶಿವಕುಮಾರ್, ಬೆಂಗಳೂರಿನ ನಾಗರಿಕರಿಗೆ ಕುಡಿಯುವ ನೀರಿನಿಂದ ಯಾವುದೇ ಸಮಸ್ಯೆ ಎದುರಾಗಬಾರದು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.
ರಾಜ್ಯದ ಕೆಲವು ಕಡೆ ಕಲುಷಿತ ನೀರು ಕುಡಿಯುವ ನೀರಿನ ಜತೆ ಮಿಶ್ರವಾಗಿ ಜನರು ಅಸ್ವಸ್ಥಗೊಂಡು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ವಿಚಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೀಗಾಗಿ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ನೀರಿನ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆ, ಉತ್ತಮ ಗುಣಮಟ್ಟದ ನೀರಿನ ಬಗ್ಗೆ ಖಾತರಿ ಮಾಡಿಕೊಳ್ಳಬೇಕು. ಆ ಘಟಕಗಳಿಂದ ಸರಬರಾಜಾಗುವ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ಕುಡಿಯಲು ಯೋಗ್ಯವೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಶಿವಕುಮಾರ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಜನರಿಗೆ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜನರಿಗೆ ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.