300ಕ್ಕೂ ಹೆಚ್ಚು ಸ್ಥಾನ ಗೆದ್ದು ಇಂಡಿಯಾ ಮೈತ್ರಿಕೂಟ ಸರಕಾರ ರಚಿಸಲಿದೆ : ಡಿ.ಕೆ.ಶಿವಕುಮಾರ್

Update: 2024-05-16 16:48 GMT

Photo : x/@ANI

ಲಖನೌ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟ 200 ಸ್ಥಾನಗಳ ಅಸುಪಾಸಿನಲ್ಲಿ ಉಳಿಯಲಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರಕಾರ ರಚಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ ಎಂದರು.

ರಾಹುಲ್ ಗಾಂಧಿ ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು ಎಂದು ಶಿವಕುಮಾರ್ ಹೇಳಿದರು.

ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ 1.20 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತಿದ್ದೇವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಿಸಿದೆವು. ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬಗಳಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದೇವೆ. ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆ ಘೋಷಿಸಿದೆವು ಎಂದು ಅವರು ಹೇಳಿದರು.

ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ: ಬಿಜೆಪಿ 10 ವರ್ಷಗಳ ಹಿಂದೆ ಕಪ್ಪು ಹಣ ತಂದು ಜನರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಅವರು ಕೊಟ್ಟ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಅವರು ಟೀಕಿಸಿದರು.

ಕರ್ನಾಟಕದಲ್ಲಿ 6.5 ಕೋಟಿ ಜನಸಂಖ್ಯೆ ಇದ್ದು, ನಮ್ಮ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ. ಇದೆ. ಆ ಪೈಕಿ 52 ಸಾವಿರ ಕೋಟಿ ರೂ.ಅನುದಾನವನ್ನು ಗ್ಯಾರಂಟಿ ಯೋಜನೆಗಳ ಜಾರಿಗೆ ಮೀಸಲಿಟ್ಟಿದ್ದೇವೆ. ಇನ್ನು 1.20 ಲಕ್ಷ ಕೋಟಿಯಷ್ಟು ಹಣವನ್ನು ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ ಎಂದು ಶಿವಕುಮಾರ್ ಹೇಳಿದರು.

ಯುಪಿಎ ಅವಧಿಯಲ್ಲಿ ಹಸಿವು ನೀಗಿಸಲು ಆಹಾರ ಭದ್ರತಾ ಕಾಯ್ದೆ, ನಿರುದ್ಯೋಗ ಸಮಸ್ಯೆ ನಿವಾರಿಸಲು ನರೇಗಾ, ಎಲ್ಲರಿಗೂ ಶಿಕ್ಷಣ ಸಿಗಲು ಶೈಕ್ಷಣಿಕ ಹಕ್ಕು, ಮಾಹಿತಿ ಹಕ್ಕು ಜಾರಿ ಮಾಡಲಾಗಿತ್ತು. ಇಂತಹ ಯಾವುದಾದರೂ ಒಂದು ಯೋಜನೆಯನ್ನು ಬಿಜೆಪಿ ಸರಕಾರ ಕಳೆದ ಹತ್ತು ವರ್ಷಗಳಲ್ಲಿ ಕೊಟ್ಟಿದೆಯೇ?. ಜನರ ಕಷ್ಟಗಳಿಗೆ ಪರಿಹಾರ ನೀಡಲು ಕೇಂದ್ರ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಶಿವಕುಮಾರ್ ದೂರಿದರು.

ಕಾಂಗ್ರೆಸ್ ಐದು ನ್ಯಾಯ ಯೋಜನೆಗಳ ಮೂಲಕ ಒಟ್ಟಾರೆ 25 ಗ್ಯಾರಂಟಿಗಳನ್ನು ಪ್ರಕಟಿಸಿದ್ದು, ಮಹಾಲಕ್ಷ್ಮಿ ಯೋಜನೆ ಮೂಲಕ ವಾರ್ಷಿಕ 1 ಲಕ್ಷ ರೂ. ಆರ್ಥಿಕ ನೆರವು, ನಿರುದ್ಯೋಗಿ ಯುವಕರಿಗೆ ವಾರ್ಷಿಕ ಒಂದು ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, ರೈತರ ಸಾಲಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ, ನರೇಗಾ ಕೂಲಿ 400 ರೂ.ಗೆ ಏರಿಕೆ, ನಗರ ಪ್ರದೇಶದಲ್ಲಿ ಉದ್ಯೋಗ ಖಾತ್ರಿ, 25 ಲಕ್ಷ ವರೆಗಿನ ಆರೋಗ್ಯ ವಿಮೆ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಮೋದಿ ಮಂಗಳಸೂತ್ರದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಅವರು ಅಧಿಕಾರಕ್ಕೆ ಬರುವ ಮುನ್ನ ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ 25 ಸಾವಿರ ರೂ. ಇತ್ತು. ಈಗ 10 ವರ್ಷಗಳ ನಂತರ ಅದು 75 ಸಾವಿರ ರೂ.ಗಳಿಗೆ ಏರಿಕೆಯಾಗಿದೆ. ಇದರಿಂದಾಗಿ ಮಹಿಳೆಯರು ಮಂಗಳಸೂತ್ರ ಮಾಡಿಸಿಕೊಳ್ಳಲು ಪರದಾಡುವಂತಾಗಿದೆ ಎಂದು ಅವರು ತಿರುಗೇಟು ನೀಡಿದರು.

ಉತ್ತರ ಪ್ರದೇಶದಲ್ಲಿ 6 ಸಾವಿರ ಹುದ್ದೆಗಳ ನೇಮಕಾತಿಗೆ 60 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ನಿರುದ್ಯೋಗ ಸಮಸ್ಯೆಗೆ ಇದೇ ದೊಡ್ಡ ಸಾಕ್ಷಿಯಾಗಿದೆ. ಈ ರಾಜ್ಯದಿಂದ ಯುವಕರು ಉದ್ಯೋಗ ಹುಡುಕಿಕೊಂಡು ಬೆಂಗಳೂರು ಹಾಗೂ ಇತರೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ, ಬಿಜೆಪಿ ಕೇವಲ ಭಾವನಾತ್ಮಕ ವಿಚಾರಗಳ ಮೂಲಕ ರಾಜಕೀಯ ಮಾಡುತ್ತಿದೆ ಎಂದು ಅವರು ಹೇಳಿದರು.

ಜಾತಿ ಗಣತಿ ಮೂಲಕ ಎಲ್ಲ ಸಮುದಾಯಗಳ ಸ್ಥಿತಿ ಅರಿತು ಅವರಿಗೆ ಜನಸಂಖ್ಯೆ ಅನುಗುಣವಾಗಿ ಅನುದಾನ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಕರ್ನಾಟಕದಲ್ಲಿ ಇದಕ್ಕಾಗಿ ಕಾನೂನು ತಂದು ಪರಿಶಿಷ್ಟರಿಗೆ ಜನಸಂಖ್ಯೆ ಅನುಗುಣವಾಗಿ 39 ಸಾವಿರ ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಶಿವಕುಮಾರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News