ಕನ್ನಡ-ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ದಿಲ್ಲಿಗೆ ಗಣ್ಯರ ನಿಯೋಗ: ಡಾ.ಪುರುಷೋತ್ತಮ ಬಿಳಿಮಲೆ

Update: 2024-12-16 13:04 GMT

ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ಕನ್ನಡದ ಜ್ವಲಂತ ಸಮಸ್ಯೆಗಳ ಪರಿಹಾರದ ಕುರಿತಂತೆ ಕೇಂದ್ರ ಸರಕಾರವನ್ನು ಆಗ್ರಹಿಸುವ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಗಣ್ಯರ ನಿಯೋಗವು ನಾಳೆ(ಡಿ.17) ದಿಲ್ಲಿಗೆ ಭೇಟಿ ನೀಡಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ನಿಯೋಗವು ಮೂರು ದಿನಗಳ ಕಾಲ(ಡಿ.19ರವರೆಗೆ) ದಿಲ್ಲಿಯಲ್ಲಿದ್ದು, ಕರ್ನಾಟಕದ ಸಂಸದರನ್ನು ಭೇಟಿ ಮಾಡಿ ಕನ್ನಡ ಭಾಷೆ-ಸಂಸ್ಕೃಂತಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಲಿದೆ ಎಂದಿದ್ದಾರೆ.

ಗ್ರಾಮೀಣ ಬ್ಯಾಂಕುಗಳ ವಿಲೀನದ ನೆಪದಲ್ಲಿ ಕನ್ನಡ ಅಸ್ಮಿತೆಯ ಕಡೆಗಣನೆ, ಸ್ಥಳೀಯರಿಗೆ ಉದ್ಯೋಗಾವಕಾಶಗಳ ವಂಚನೆ, ಬ್ಯಾಂಕ್ ಆಡಳಿತದಲ್ಲಿ ಕನ್ನಡ ಭಾಷೆಯ ಸೇವೆ, ಕನ್ನಡದಲ್ಲಿ ಪ್ರಾಥಮಿಕ ಶಿಕ್ಷಣ, ಜೆ.ಎನ್.ಯು ಕನ್ನಡ ಪೀಠದ ಬಲವರ್ಧನೆ, ಕನ್ನಡ ಶಾಸ್ತ್ರೀಯ ಭಾಷೆ ಕೇಂದ್ರದ ಕಾರ್ಯ ನಿರ್ವಹಣೆ, ಕೇಂದ್ರ ಸರಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೂ ಆದ್ಯತೆ, ನ್ಯಾಯಾಲಯಗಳಲ್ಲಿ ಪ್ರಾದೇಶಿಕ ಭಾಷೆಗಳ ತೀರ್ಪುಗಳ ಪ್ರಾಮುಖ್ಯತೆ ಸೇರಿದಂತೆ ಹಲವು ವಿಷಯಗಳನ್ನು ನಿಯೋಗವು ಕೇಂದ್ರ ಸಚಿವರ ಗಮನಕ್ಕೆ ತಂದು ಪರಿಹಾರಕ್ಕೆ ಆಗ್ರಹಿಸಲಿದೆ ಎಂದು ಅವರು ವಿವರಿಸಿದ್ದಾರೆ.

ಪ್ರಾಧಿಕಾರದ ನಿಯೋಗದಲ್ಲಿ ಕರ್ನಾಟಕ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮಾಜಿ ಸಂಸದ ಡಾ.ಎಲ್.ಹನುಮಂತಯ್ಯ, ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ, ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಡಾ.ವಿ.ಪಿ.ನಿರಂಜನಾರಾಧ್ಯ, ಡಾ.ಎ.ಬಿ.ರಾಮಚಂದ್ರಪ್ಪ ಮತ್ತು ದಾಕ್ಷಾಯಿಣಿ ಹುಡೇದ ಇರಲಿದ್ದಾರೆ ಎಂದು ಡಾ.ಬಿಳಿಮಲೆ ಮಾಹಿತಿ ನೀಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News