ಅಕ್ರಮ ಜಾಹೀರಾತು ತಡೆಯುವಲ್ಲಿ ವಿಫಲ, ಅಧಿಕಾರಿಗಳ ವಿರುದ್ಧ ಕ್ರಮ: ಹೈಕೋರ್ಟ್‍ಗೆ BBMP ಮಾಹಿತಿ

Update: 2023-10-11 13:34 GMT

ಬೆಂಗಳೂರು, ಅ.11: ಅನಧಿಕೃತ ಜಾಹೀರಾತುಗಳ ಅಳವಡಿಕೆಯ ವಿರುದ್ಧ ಕ್ರಮಕ್ಕೆ ಮುಂದಾಗದ ಹಾಗೂ ಅಕ್ರಮ ಜಾಹೀರಾತು ಅಳವಡಿಕೆ ತಡೆಗೆ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್‍ಗೆ ತಿಳಿಸಿದೆ.

ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಹಾವಳಿ ತಡೆಯಲು ರಾಜ್ಯ ಸರಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಬಿಬಿಎಂಪಿ ಪರ ವಕೀಲರು ಮಾಹಿತಿ ನೀಡಿದರು.

ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಿದರೆ ಸಾಲದು. ಆ ಪ್ರಕ್ರಿಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಅಲ್ಲದೇ, ಮುಂದಿನ ವಿಚಾರಣೆ ವೇಳೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಪ್ರಕ್ರಿಯೆ ಆರಂಭಿಸಿದ ನಂತರ ನಡೆದಿರುವ ಬೆಳವಣಿಗೆಗಳ ಮಾಹಿತಿ ನೀಡಬೇಕು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷದಲ್ಲಿ ಎಷ್ಟು ಜಾಹೀರಾತು ಅಳವಡಿಕೆಗೆ ಅನುಮತಿ ನೀಡಲಾಗಿದೆ. ಜಾಹೀರಾತುದಾರರು ಎಷ್ಟು ಹಣ ಶುಲ್ಕ ಪಾವತಿ ಮಾಡಿದ್ದಾರೆ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News