ʼಕಾಂಗ್ರೆಸ್‌ನಿಂದ ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ‌ʼ ಹೇಳಿಕೆ‌ | ಪ್ರಧಾನಿ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆ

Update: 2024-05-25 18:48 GMT

ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : ಕಾಂಗ್ರೆಸ್‌ನಿಂದ ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆಯಾಗಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆ ವಿರೋಧಿಸಿ ಹೆಬ್ಬಾಳದ ನಿವಾಸಿ 32 ವರ್ಷದ ಝಿಯಾವುರ್‌ ರಹಮಾನ್‌ ನೊಮಾನಿ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಮೇ.23ರಂದು ಖಾಸಗಿ ದೂರು ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿಯವರ ಪ್ರಚೋದನಾಕಾರಿ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ ಎಂದು kannada.barandbench.com ವರದಿ ಮಾಡಿದೆ.

ಪ್ರಧಾನಿಯ ಭಾಷಣವು ಮುಸ್ಲಿಮರನ್ನು ನಿಂದಿಸುವಂತಿದೆ. ತಮ್ಮ‌ ದ್ವೇಷ ಭಾಷಣದ ಮೂಲಕ ಪ್ರಧಾನಿ ಮೋದಿ ಸಂವಿಧಾನದ 14, 17 ಮತ್ತು 51ಎ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಸಮಾಜದಲ್ಲಿ ದ್ವೇಷ ಹರಡಿದ, ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಪ್ರಧಾನಿ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರುದಾರರು ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಮೇ 23ರಂದು ಖಾಸಗಿ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ತಿಂಗಳು ರಾಜಸ್ಥಾನದಲ್ಲಿ ನಡೆದಿದ್ದ ಪ್ರಚಾರ ಭಾಷಣದಲ್ಲಿ, ಸಮಾಜ ಮತ್ತು ಧರ್ಮಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಕ್ರಿಮಿನಲ್‌ ಪ್ರಚೋದನೆ ನೀಡುವ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳಾದ 153ಎ, 153ಬಿ, 295ಎ, 503, 504, 505(2) ಅಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಕರಣ ದಾಖಲಿಸಲು ಅಮೃತಹಳ್ಳಿ ಠಾಣಾ ಪೊಲೀಸರಿಗೆ ನಿರ್ದೇಶಿಸುವಂತೆ ಖಾಸಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಎ.26ರಂದು ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಅಮೃತಹಳ್ಳಿ ಪೊಲೀಸರು ಇದು ಭಾರತೀಯ ಚುನಾವಣಾ ಆಯೋಗದ ವ್ಯಾಪ್ತಿಗೆ ಒಳಪಡುವುದರಿಂದ ಎಫ್‌ಐಆರ್‌ ದಾಖಲಿಸಲಾಗದು ಎಂದು ಹಿಂಬರಹ ನೀಡಿದ್ದರು. ಇದಾದ ಬಳಿಕ ಏಪ್ರಿಲ್‌ 27ರಂದು ದೂರುದಾರ ನೊಮಾನಿ ಈಮೇಲ್‌ ಮೂಲಕ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ಅಲ್ಲಿಂದಲೂ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮೇ 23ರಂದು ನ್ಯಾಯಾಲಯದ ಮೆಟ್ಟಿಲೇರಲಾಗಿದೆ ಎಂದು ಖಾಸಗಿ ದೂರಿನಲ್ಲಿ ವಿವರಿಸಲಾಗಿದೆ. ಪ್ರಕರಣ ವಿಚಾರಣೆಯು ಮೇ 28ಕ್ಕೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News