ಪಂಚಾಯಿತಿ ಮಟ್ಟದಲ್ಲಿ ತಂಡಗಳನ್ನು ರಚಿಸಿ, ಮನೆ ಮನೆಗೆ ಗ್ಯಾರಂಟಿ ತಲುಪಿಸಿ: ಡಿ.ಕೆ.ಶಿವಕುಮಾರ್

Update: 2024-03-23 13:49 GMT

‌Photo: X/@DKShivakumar

ಬೆಂಗಳೂರು: ಪಂಚಾಯಿತಿ ಮಟ್ಟದಲ್ಲಿ ತಂಡಗಳನ್ನು ರಚಿಸಿ ಮನೆ ಮನೆಗೆ ಹೋಗಿ ಜನರಿಗೆ ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಮೂಲಕ, ನೀವು ನಮಗೆ ಶಕ್ತಿ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಶನಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಮೊದಲ ಗ್ಯಾರಂಟಿ ‘ಗೃಹಜ್ಯೋತಿ’ ಯೋಜನೆಯಿಂದ 1.50 ಕೋಟಿ ಮನೆಗಳಿಗೆ ಪ್ರಯೋಜನವಾಗುತ್ತಿದೆ. ಅನ್ನಭಾಗ್ಯ ಯೋಜನೆ ಮೂಲಕ 10 ಕೆ.ಜಿ ಅಕ್ಕಿ ನೀಡುವ ಘೋಷಣೆ ಮಾಡಿದೆವು. ಅಕ್ಕಿ ಖರೀದಿಗೆ ಕೇಂದ್ರ ಅವಕಾಶ ನೀಡಿಲ್ಲ. ಹೀಗಾಗಿ ನಮ್ಮ ಸರಕಾರ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣವನ್ನು ಫಲಾನುಭವಿಗಳಿಗೆ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಳಲುತ್ತಿರುವ ಮಹಿಳೆಯರಿಗೆ ನೆರವು ನೀಡಲು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದೆವು. ಇಂದು 1.33 ಕೋಟಿ ಮನೆಯೊಡತಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲೆಡೆ ಮಹಿಳೆಯರಿಗೆ ಸರಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ತೆ ನೀಡಲು ಯುವನಿಧಿ ಯೋಜನೆ ಜಾರಿ ಮಾಡಿದೆವು ಎಂದು ಶಿವಕುಮಾರ್ ತಿಳಿಸಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಬಡ ಕುಟುಂಬಗಳಿಗೆ ಮಾಸಿಕ 5-6 ಸಾವಿರ ರೂ. ಉಳಿತಾಯವಾಗುತ್ತದೆ. ನೀವು ಕಷ್ಟಪಟ್ಟು ಕೆಲಸ ಮಾಡಬೇಕು. ಮರಕ್ಕೆ ಬೇರು ಎಷ್ಟು ಮುಖ್ಯವೋ ಅದೇ ರೀತಿ ಮನುಷ್ಯನಿಗೆ ನಂಬಿಕೆ ಮುಖ್ಯ. ಕಾಂಗ್ರೆಸ್ ಪಕ್ಷ ನಿಮ್ಮನ್ನು ನಂಬಿದೆ. ನೀವು ಈ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯದ 3.71 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ನಲ್ಲಿ 56 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ. ಮೀಸಲು ಇಟ್ಟಿದ್ದೇವೆ. ನಮ್ಮ ಯೋಜನೆಗಳಿಂದ ದೇವಾಲಯಗಳಲ್ಲಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿ ಹುಂಡಿ ತುಂಬುತ್ತಿದೆ. ಮಹಿಳೆಯರು ನಿಮ್ಮ ಹೆಸರಲ್ಲಿ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಎಐಸಿಸಿ ನಾಯಕರು ಕೂಡ ಐದು ನ್ಯಾಯ ಯೋಜನೆಗಳನ್ನು ಘೋಷಿಸಿದ್ದು, ಈ ನ್ಯಾಯ ಯೋಜನೆಗಳಲ್ಲಿ ತಲಾ ಐದು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಮಹಿಳಾ ನ್ಯಾಯ ಯೋಜನೆಯಲ್ಲಿ ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮನೆಯೊಡತಿಯರಿಗೆ ವರ್ಷಕ್ಕೆ 1 ಲಕ್ಷ ರೂ., ಕೇಂದ್ರದ ಹೊಸ ನೇಮಕಾತಿಗಳಲ್ಲಿ ಅರ್ಧದಷ್ಟು ಮಹಿಳೆಯರಿಗೆ ಮೀಸಲು, ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ವೇತನದಲ್ಲಿ ಕೇಂದ್ರದ ಪಾಲು ದುಪ್ಪಟ್ಟು ಮಾಡಲಾಗುವುದು ಎಂದು ಅವರು ತಿಳಿಸಿದರು.

ರೈತ ನ್ಯಾಯದಲ್ಲಿ ಕಾನೂನು ಬದ್ಧ ಕನಿಷ್ಠ ಬೆಂಬಲ ಬೆಲೆ, ಕೃಷಿ ಕ್ಷೇತ್ರ ಜಿಎಸ್ಟಿ ಮುಕ್ತ, ಕೃಷಿ ಸಾಲ ಮನ್ನಾ ಆಯೋಗ ಸ್ಥಾಪನೆ. ಶ್ರಮಿಕ ನ್ಯಾಯದಲ್ಲಿ ಕಾರ್ಮಿಕರಿಗೆ ಆರೋಗ್ಯದ ಹಕ್ಕು, ಕಾರ್ಮಿಕ ವಿರೋಧಿ ಕಾನೂನು ರದ್ದು, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ನಗರ ಉದ್ಯೋಗ ಖಾತ್ರಿ ಹೀಗೆ ಐದು ನ್ಯಾಯ ಯೋಜನೆಯಲ್ಲಿ 25 ಗ್ಯಾರಂಟಿ ಗಳನ್ನು ಘೋಷಣೆ ಮಾಡಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಈ ಯೋಜನೆಗಳನ್ನು ಜಾರಿಗೊಳಿಸಲು ಈ ಅನುಷ್ಠಾನ ಸಮಿತಿ ಮಾಡಲಾಗಿದೆ. ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದ ಸಮಿತಿ ಮಾಡಿ ಅವರಿಗೆ ಕಚೇರಿ ಹಾಗೂ ಗೌರವಧನ ನೀಡಲಾಗುವುದು. ಇದರ ಜತೆಗೆ ಆರಾಧನ, ಶಿಕ್ಷಣ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗುತ್ತಿದೆ ಎಂದು ಶಿವಕುಮಾರ್ ತಿಳಿಸಿದರು.

ನೀವು ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲಿಲ್ಲವಾದರೆ ನೀವು ನಾಯಕರಲ್ಲ, ನೀವು ಕೆಲಸ ಮಾಡಿಲ್ಲ ಎಂದರ್ಥ. ಹೀಗಾಗಿ ನೀವು ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತನ್ನಿ, ಪಕ್ಷ ಬಲಪಡಿಸಿ ಎಂದು ಅವರು ಕರೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News