ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ | ಉಪ ಪೊಲೀಸ್ ವರಿಷ್ಠಾಧಿಕಾರಿ ಕನಕಲಕ್ಷ್ಮೀಗೆ ಜಾಮೀನು
Update: 2025-04-30 00:21 IST
ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಸ್.ಜೀವಾ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಕನಕಲಕ್ಷ್ಮೀಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿದೆ.
ಆರೋಪಿ ಕನಕಲಕ್ಷ್ಮೀ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಮಾನ್ಯ ಮಾಡಿ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದೆ.
ಕನಕಲಕ್ಷ್ಮೀ ಅವರು ಒಂದು ಲಕ್ಷ ರೂ.ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತೆ ಒದಗಿಸಬೇಕು. ಸೂಕ್ತ ಕಾರಣಗಳನ್ನು ನೀಡಿ ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನವೂ ಕನಕಲಕ್ಷ್ಮೀ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಕನಕಲಕ್ಷ್ಮೀ ಪ್ರಭಾವ ಬೀರಬಾರದು ಮತ್ತು ಇಂಥದ್ದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗಬಾರದು ಎಂದು ಷರತ್ತು ವಿಧಿಸಿ ಆದೇಶಿಸಿದೆ.