ಐಪಿಎಲ್ ಪ್ಲೇ-ಆಫ್ ಸುತ್ತಿಗೆ ಲಗ್ಗೆಯಿಟ್ಟ ಆರ್.ಸಿ.ಬಿ.: ಪಂದ್ಯ ವೀಕ್ಷಿಸಿ ಸಂಭ್ರಮಿಸಿದ ಸಿಎಂ ಸಿದ್ದರಾಮಯ್ಯ

Update: 2024-05-19 05:27 GMT

 ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ ಆರ್.ಸಿ.ಬಿ. ಮತ್ತು  ಚೆನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವನ್ನು ಸಿಎಂ ಸಿದ್ದರಾಮಯ್ಯ ವೀಕ್ಷಿಸಿದರು.

ಬೆಂಗಳೂರು, ಮೇ 19: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಸೋಲಿನ ಸುಳಿಯಿಂದ ಅದ್ಭುತವಾಗಿ ಮೇಲೆದ್ದು ಪ್ಲೇ-ಆಫ್ ಸುತ್ತಿಗೆ ಲಗ್ಗೆಯಿಟ್ಟ ರೋಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಾಧನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಡಾಡಿದ್ದಾರೆ.

ಶನಿವಾರ ರಾತ್ರಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಆರ್.ಸಿ.ಬಿ.ಯ ಮಾಡು ಇಲ್ಲವೇ ಮಡಿ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಂಗಣದಲ್ಲಿ ಖುದ್ದು ಹಾಜರಿದ್ದು ವೀಕ್ಷಿಸಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಎಚ್.ಸಿ.ಮಹದೇವಪ್ಪ ಮತ್ತಿತರರು ಕೂಡಾ ಇದ್ದರು.

ಈ ಬಗ್ಗೆ 'X'ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, "ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್.ಸಿ.ಬಿ. ಪ್ಲೇಆಫ್ ಸುತ್ತಿಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದು ಪಂದ್ಯದ ಪ್ರತಿ ಕ್ಷಣವನ್ನು ಆನಂದಿಸಿದೆ. ಆರ್.ಸಿ.ಬಿ. ತಂಡದ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾದುದ್ದು ಖುಷಿಕೊಟ್ಟಿದೆ. ಇದು ಆರ್.ಸಿ.ಬಿ.ಯ ಹೊಸ ಅಧ್ಯಾಯ" ಎಂದು ಬರೆದುಕೊಂಡಿದ್ದಾರೆ.

ಉತ್ತಮ ರನ್ ರೇಟ್ ನೊಂದಿಗೆ ಗೆಲ್ಲಲೇಬೇಕಾದ ಶನಿವಾರದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಅಂತರದ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಪ್ಲೇ-ಆಪ್ ಗೆ ಪ್ರವೇಶಿಸಿದೆ.


Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News