ಬೆಂಗಳೂರು | ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

Update: 2024-09-25 11:07 GMT

ಬೆಂಗಳೂರು : ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಗಳ ಹಿನ್ನೆಲೆಯಲ್ಲಿ ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

ಸಿಎಂ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ, ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಿ, ಮೂರು ತಿಂಗಳ ಒಳಗಾಗಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ರಮೇಶ್ ಗೌಡ ಒತ್ತಾಯ ಮಾಡಿದರು.

ಮುಡಾದಲ್ಲಿ ನಿವೇಶನಗಳನ್ನು ಕಬಳಿಸಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ನ್ಯಾಯಾಲಯಗಳ ಆದೇಶ ಕೂಡ ಸ್ಪಷ್ಟವಾಗಿದೆ. ತಮ್ಮ ಕುಟುಂಬಕ್ಕೆ ಅನುಕೂಲ ಮಾಡಿಕೊಳ್ಳಲು ಸಿಎಂ ಅವರು ಅಧಿಕಾರ ದುರ್ಬಳಕೆ ಜತೆಗೆ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ಹೀಗಾಗಿ ಒಂದು ಕ್ಷಣವೂ ಅವರು ಅಧಿಕಾರದಲ್ಲಿ ಮುಂದುವರಿಯದೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರುʼ

ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಜೆಡಿಎಸ್ ನಗರ ಘಟಕದ ಅನೇಕ ಪದಾಧಿಕಾರಿಗಳು, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ಇತರೆ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News