ನ.24ಕ್ಕೆ ಕೆ-ಸೆಟ್, ರಾಯಚೂರು ವಿವಿ ಬೋಧಕರ ಪರೀಕ್ಷೆ: ಸಕಲ ಸಿದ್ಧತೆ ಮಾಡಿಕೊಂಡಿರುವ ಕೆಇಎ
ಬೆಂಗಳೂರು : ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಹಾಗೂ ರಾಯಚೂರು ವಿಶ್ವ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ನ.24ರಂದು ನಡೆಯಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಒಟ್ಟು 41 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.05 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 12 ಜಿಲ್ಲೆಗಳ (ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ) 252 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯನ್ನು 2,000 ಮಂದಿ ತೆಗೆದುಕೊಂಡಿದ್ದು, ಕೇವಲ ಬೆಂಗಳೂರು ನಗರದ ಮೂರು ಕೇಂದ್ರಗಳಲ್ಲಿ ನಡೆಯಲಿದೆ.
ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆಗಳು ನಡೆಯಲಿದ್ದು, ಒಮ್ಮೆಗೇ ಎರಡೂ ಪತ್ರಿಕೆಗಳ (ಪತ್ರಿಕೆ 1 ಮತ್ತು 2) ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮೂರು ಗಂಟೆ ಅವಧಿಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಬೇಕಾಗುತ್ತದೆ. ಎರಡೂ ಪತ್ರಿಕೆಗಳಿಗೆ ಪ್ರತ್ಯೇಕ ಓಎಂಆರ್ ನೀಡುತ್ತಿದ್ದು, ಆಯಾಯ ಓಎಂಆರ್ ನಲ್ಲೇ ಅದರ ಉತ್ತರಗಳನ್ನು ಎಚ್ಚರಿಕೆಯಿಂದ ದಾಖಲಿಸಬೇಕು.
ಅಭ್ಯರ್ಥಿಗಳು, ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆ ಡೌನ್ ಲೋಡ್ ಮಾಡಿಕೊಂಡಿದ್ದ ಮಾದರಿ ಓಎಂಆರ್ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಈ ಹಿಂದಿನ ಎಲ್ಲ ಪರೀಕ್ಷೆಗಳ ಹಾಗೆಯೇ ಈ ಪರೀಕ್ಷೆಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳನ್ನು ತೀವ್ರ ಶೋಧ ನಡೆಸಿಯೇ ಒಳ ಬಿಡಲಾಗುತ್ತದೆ. ಇದಕ್ಕೆ ಅಗತ್ಯ ಪೊಲೀಸ್ ಮತ್ತು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಯಚೂರು ವಿವಿ ಪರೀಕ್ಷೆಗೆ ಮಾತ್ರ ನೆಗೆಟಿವ್ ಮೌಲ್ಯಮಾಪನ ಇರುತ್ತದೆ. ಕೆ-ಸೆಟ್ ಪರೀಕ್ಷೆಗೆ ಆ ರೀತಿ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.