ಕನ್ನಡಿಗರಿಗೆ ಉದ್ಯೋಗದ ಹೋರಾಟಕ್ಕೆ ಕರವೇ ಸಜ್ಜು : ಟಿ.ಎ.ನಾರಾಯಣಗೌಡ

Update: 2024-06-26 15:16 GMT

ಬೆಂಗಳೂರು : ಕನ್ನಡ ನಾಮಫಲಕ ಚಳವಳಿಯ ನಂತರ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ’ ಎಂಬ ಘೋಷಣೆಯಡಿಯಲ್ಲಿ ಜು.1ರಿಂದ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಯಲಿದೆ. ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಎಲ್ಲ ಬಗೆಯ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಪಾಲು ಇರಬೇಕು ಎಂಬುದು ನಮ್ಮ ನ್ಯಾಯಯುತವಾದ ಬೇಡಿಕೆ. ಇದಕ್ಕಾಗಿಯೇ ಡಾ.ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲಾಗಿತ್ತು. ಆದರೆ ಖಾಸಗಿ ವಲಯ ಬೆಳೆದ ಹಿನ್ನೆಲೆಯಲ್ಲಿ, ಡಾ.ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕದ ಯುವಜನರು ನಿರುದ್ಯೋಗಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ.

ಜು.1ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡು, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಪ್ರಮುಖ ಬೇಡಿಕೆಗಳು

1. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946  ಅನ್ವಯ ರಾಜ್ಯ ಸರಕಾರ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು.

2. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಉದ್ಯೋಗದಲ್ಲಿ ಶೇ.100ರಷ್ಟು ಇತರ ಹುದ್ದೆಗಳಲ್ಲಿ ಶೇ.80ರಷ್ಟು ಕನ್ನಡಿಗರಿಗೆ ಮೀಸಲಿಡಬೇಕು.

3. ರಾಜ್ಯ ಸರಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಶೇ.100 ಮೀಸಲಾತಿ ನೀಡಬೇಕು.

4. ಕೇಂದ್ರ ಸರಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ 'ಸಿ' ಮತ್ತು ಗ್ರೂಪ್ ಡಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ನೀಡಬೇಕು.

5. ರಾಜ್ಯ ಸರಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು.

6. ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News