ಲೋಕಸಭೆ ಚುನಾವಣೆ: ಶೇ.50 ರಷ್ಟು ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ: ಡಿ.ಕೆ. ಶಿವಕುಮಾರ್

Update: 2024-03-07 16:59 GMT

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಸುದ್ದು, ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗುರುವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇಂದಿನ ಸಭೆಗೆ ಮುಖ್ಯಮಂತ್ರಿ ಆಗಮಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಇಂದು ಬಸವ ಕಲ್ಯಾಣದಲ್ಲಿ ದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದನ್ನು ಮುಂದೂಡಲು ಸಾಧ್ಯವಿಲ್ಲ. ಇದು ಆದ್ಯತೆಯ ಕಾರ್ಯಕ್ರಮವಾದ್ದರಿಂದ ಸಿಎಂ ಅಲ್ಲಿ ಭಾಗವಹಿಸುತ್ತಿದ್ದಾರೆ.

ನಾವುಗಳು ಸೇರಿ ಈಗಾಗಲೇ ಚರ್ಚೆ ಮಾಡಿರುವುದನ್ನು ನಾನು ಈ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ರಾಜ್ಯದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಆಗುವುದಿಲ್ಲ. ಒಂದೆರಡು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿಯವರ ರಾಜಕಾರಣಕ್ಕೂ, ನಮ್ಮ ರಾಜಕಾರಣಕ್ಕೂ ವ್ಯತ್ಯಾಸವಿದೆ. ನಮ್ಮ ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಮೇಲೆ ರಾಜಕಾರಣ ನಡೆಯುವುದಿಲ್ಲ. ಪಕ್ಷ, ನಮ್ಮ ಗ್ಯಾರಂಟಿ ಯೋಜನೆಗಳ ಮೇಲೆ ನಾವು ರಾಜಕೀಯ ಮಾಡುತ್ತೇವೆ. ಅವರು ಅವರದೇ ಆದ ಲೆಕ್ಕಾಚಾರ ಇಟ್ಟುಕೊಂಡಿದ್ದರೆ, ನಾವು ನಮ್ಮದೇ ಲೆಕ್ಕಾಚಾರ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.

ರಾಜಕೀಯದಲ್ಲಿ ಎಲ್ಲ ಸಾಧ್ಯತೆಗಳೂ ಇರುತ್ತವೆ ಎಂದು ಸಚಿವರ ಸ್ಪರ್ಧೆ ಮತ್ತು ವಲಸಿಗರಿಗೆ ಟಿಕೆಟ್ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿದರು.

ನಾವು ಈಗಾಗಲೇ ಒಂದು ತಿಂಗಳ ಹಿಂದೆಯೇ ಚರ್ಚೆ ಮಾಡಿ, ಯಾರಿಗೆ ಯಾವ ಕಿವಿಮಾತು ಹೇಳಬೇಕೋ ಹೇಳಿದ್ದೇವೆ ಎಂದು ಅವರು ತಿಳಿಸಿದರು.

ಸುಪ್ರೀಂ ಕೋರ್ಟ್ ನಿಮಗೆ ರಿಲೀಫ್ ನೀಡಿದ್ದು, ನೊಟೀಸ್ ಬರುತ್ತಿಲ್ಲವೇ? ಎಂದು ಕೇಳಿದಾಗ, "ಇನ್ನೂ ನೊಟೀಸ್ ಬರುತ್ತಿವೆ. ಮಾಧ್ಯಮಗಳು ಹಗಲು ರಾತ್ರಿ ನನ್ನನ್ನು ಕಾಯುತ್ತಾ ಕೆಲಸ ಮಾಡಿವೆ. ಹೆರಿಗೆ ನೋವು ಅನುಭವಿಸಿದವರಿಗೆ ಗೊತ್ತು ಎಂಬಂತೆ, ನನ್ನ ನೋವು ನನಗೆ ಗೊತ್ತು. ರಾಜ್ಯದ ಜನ ನನ್ನ ಪರವಾಗಿ ಹೋರಾಟ ಮಾಡಿದರು. ಪ್ರಾರ್ಥನೆ ಮಾಡಿದರು. ಈಗ ಅವರಿಗೆ ಸಮಾಧಾನ ಆಗಿದೆಯಲ್ಲ ಅಷ್ಟೇ ಸಾಕು" ಎಂದು ಅವರು ನುಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News