ಬಿಜೆಪಿಯಿಂದ ರಾಜಭವನ ದುರುಪಯೋಗ : ಮಧು ಬಂಗಾರಪ್ಪ ಆರೋಪ

Update: 2024-08-30 17:03 GMT

ಮಂಡ್ಯ : ರಾಜಭವನವನ್ನು ಬಿಜೆಪಿ ದುರುಪಯೋಗ ಪಡಿಸಿಕೊಂಡಿರುವುದು ಎದ್ದು ಕಾಣುತ್ತದೆ. 12 ವರ್ಷಗಳಿಂದ ಹಿಂದೆ ತುಕ್ಕು ಹಿಡಿದಿರುವ ಮುಡಾ ಪ್ರಕರಣಕ್ಕೆ ಜೀವ ಕೊಡುವುದರಲ್ಲಿ ಅರ್ಥವಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಸಚಿವ ಎಸ್.ಮಧುಬಂಗಾರಪ್ಪ ಆರೋಪಿಸಿದ್ದಾರೆ.

ಜಿಲ್ಲಾಮಟ್ಟದ ವಿಜ್ಞಾನ ತರಂಗ ಸ್ಪರ್ಧೆ ಕಾರ್ಯಕ್ರಮ ಉದ್ಘಾಟನೆಗೆ ಶುಕ್ರವಾರ ನಗರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜತೆ ಶಾಸಕರು ಮತ್ತು ರಾಜ್ಯದ ಜನತೆ ಇದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರಕಾರ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವುದು ಬಿಜೆಪಿಯವರಿಗೆ ಹೊಟ್ಟೆಕಿಚ್ಚು. ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿರುವುದನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಟೀಕಿಸಿದರು.

ದೇವರಾಜ ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ ಮುಂತಾದವರು ಹಿಂದುಳಿದ ವರ್ಗಕ್ಕೆ ಹಲವಾರು ಯೋಜನೆ ಕೊಟ್ಟಿದ್ದಾರೆ. ಈಗಿನ ಸರಕಾರವೂ ಒಳ್ಳೆಯ ಕೆಲಸ ಮಾಡುತ್ತಿದೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ. ಅವರಿಗೆ ಜನರ ಅಭಿವೃದ್ಧಿಗಿಂತ ಕಮೀಷನ್ ಬಗ್ಗೆಯೇ ಚಿಂತನೆ ಎಂದು ಅವರು ವಾಗ್ದಾಳಿ ನಡೆಸಿದರು.

ನಮ್ಮ ಸರಕಾರ ಶಾಲಾ ಕಟ್ಟಡಗಳ ದುರಸ್ತಿಗೆ ಕ್ರಮ ಕೈಗೊಂಡಿದೆ. 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿದ್ದೇವೆ. ಶಾಲಾ ಮಕ್ಕಳಿಗೆ ಹಾಲು, ರಾಗಿ ಮಾಲ್ಟ್ ಕೊಡುತ್ತಿದ್ದೇವೆ. ಮುಂದಿನ ತಿಂಗಳಿಂದ ಎಲ್ಲ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರಕ್ಕೆ ಆರುದಿನ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News