ದ್ವೇಷ ಬಿತ್ತುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು : ಮಂಜುನಾಥ್ ಭಂಡಾರಿ

Update: 2024-10-29 16:15 GMT

ಬೆಂಗಳೂರು: ‘ವಕ್ಫ್ ಆಸ್ತಿ ನೆಪದಲ್ಲಿ ಪ್ರತಿಪಕ್ಷಗಳು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದು, ಜನಾಂಗದ ನಡುವೆ ದ್ವೇಷದ ವಿಷಬೀಜ ಬಿತ್ತುತ್ತಿವೆ. ಸಮಾಜದಲ್ಲಿ ಶಾಂತಿ ಕದಡಿ, ದ್ವೇಷ ಬಿತ್ತುವವರ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆಗ್ರಹಿಸಿದ್ದಾರೆ.

ಮಂಗಳವಾರ ಪ್ರಕಟಣೆ ನೀಡಿರುವ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಎಲ್ಲ ವರ್ಗದ ಜನರ ಹಿತ ಕಾಪಾಡುತ್ತಾ ಬಂದಿದೆ. ಸಾಮರಸ್ಯಕ್ಕೆ ಧಕ್ಕೆಯಾಗುವುದಕ್ಕೆ ಆಸ್ಪದ ಕೊಟ್ಟಿಲ್ಲ. ಆದರೆ, ಮಹಾರಾಷ್ಟ್ರ ಚುನಾವಣೆ ಹಾಗೂ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಪ್ರತಿಪಕ್ಷದವರು ಅನಗತ್ಯ ಗೊಂದಲ ಸೃಷ್ಟಿಸಿ ಕೋಮಸೌಹರ್ದತೆ ಕದಡುವ ಕೆಲಸಕ್ಕೆ ಕೈಹಾಕಿದ್ದಾರೆ’ ಎಂದು ದೂರಿದ್ದಾರೆ.

ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪನೆಯಾಗಿದ್ದು ಜನರು ಶಾಂತಿ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಇದನ್ನು ಸಹಿಸದ ಪ್ರತಿಪಕ್ಷಗಳು ಜಾತಿ, ಧರ್ಮದ ನಡುವೆ ವಿಷ ಬೀಜ ಬಿತ್ತಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಹುನ್ನಾರ ನಡೆಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಸರಕಾರ ಎಂದಿಗೂ ಸಹಿಸುವುದಿಲ್ಲ. ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರತಿನಿತ್ಯ ಒಂದಿಲ್ಲೊಂದು ಚಿತಾವಣೆ ಹೆಣೆಯುತ್ತಿರುವ ಬಿಜೆಪಿ-ಜೆಡಿಎಸ್ ಯತ್ನ ಫಲಿಸದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ವಕ್ಫ್ ಆಸ್ತಿ ವಿಚಾರವಾಗಿ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ, ಶಾಂತಿ ಕದಡಿ, ಕೋಮುಸೌಹಾರ್ದ ಹದಗೆಡಿಸುವ ಕೆಲಸಕ್ಕೆ ವಿಪಕ್ಷಗಳು ಮುಂದಾಗಿವೆ. ಆದರೆ, ಇದಕ್ಕೆ ಸರಕಾರ ಅವಕಾಶ ನೀಡುವುದಿಲ್ಲ. ಅನಗತ್ಯ ಗೊಂದಲಗಳಿಗೆ ಜನತೆ ಅವಕಾಶ ನೀಡಬಾರದು. ಸಮಾಜದಲ್ಲಿ ಶಾಂತಿ ಭಂಗಗೊಳಿಸಲು ಯತ್ನಿಸುವವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕೆಂದು ಮಂಜುನಾಥ್ ಭಂಡಾರಿ, ಸಿಎಂ ಸಿದ್ದರಾಮಯ್ಯನವರನ್ನು ಒತ್ತಾಯಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News