ಮುಖ್ಯಮಂತ್ರಿಗಳ ಜೊತೆಗಿನ ಸಭೆ ಯಶಸ್ವಿ; ಇಂದಿನ ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್: ಬಿ.ಗೋವಿಂದರಾಜ್ ಹೆಗ್ಡೆ

Update: 2024-11-20 02:14 GMT

ಬೆಂಗಳೂರು:ರಾಜ್ಯ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಇದರಿಂದ ಇಂದು (ನ.20) ರಾಜ್ಯಾದ್ಯಂತ ನಡೆಸಲು ಉದ್ದೇಶಿಸಿದ್ದ ಮದ್ಯ ಮಾರಾಟ ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ನಡೆದ ಮಾತುಕತೆಯ ವೇಳೆ ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಸಭೆಯ ಬಳಿಕ ನೀಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರಲು ಕ್ರಮ ಕೈಗೊಳ್ಳಲಾಗುವುದು, ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದೂ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೊರಲಿನಿಂದ ಸ್ಪಷ್ಟಪಡಿಸಿದರು.

ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ತಿಳಿಸಿದರು ಎಂದ ಹೆಗ್ಡೆ, ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು ಎಂದರು.

ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸುವಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು ಎಂದರು.


Delete Edit


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News