ರಾಜ್ಯದ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ್ ಸೂಚನೆ

Update: 2025-01-02 15:31 GMT

ಭೈರತಿ ಸುರೇಶ್

ಬೆಂಗಳೂರು : ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಸ್ಮಾರ್ಟ್ ಸಿಟಿ ಅಭಿಯಾನ ಶೂರುವಾದಗಿನಿಂದ ಇಲ್ಲಿಯವರೆಗೂ ರಾಜ್ಯದ 7 ಸ್ಮಾರ್ಟ್ ಸಿಟಿಗಳಲ್ಲಿ 6415.51 ಕೋಟಿ ರೂ. ಗಳ ವೆಚ್ಚದ ಕಾಮಗಾರಿಗಳು ನಡೆದಿದ್ದು, ಪೂರ್ಣಗೊಂಡಿರುವ ಹಲವು ಕಾಮಗಾರಿಗಳು ಅಷ್ಟೋಂದು ತೃಪ್ತಿದಾಯಕವಾಗಿಲ್ಲವೆಂದು ತಿಳಿದು ಬಂದ ಕಾರಣ ಬೆಂಗಳೂರು ಹೊರತುಪಡಿಸಿ ಇತರೆ 6 ಸ್ಮಾರ್ಟ್ ಸಿಟಿಗಳ ಯೋಜನೆಗಳ ಬಗ್ಗೆ ಸ್ವತಂತ್ರ ಸಂಸ್ಥೆ ಒಳಗೊಂಡಂತೆ ಸಮಿತಿ ರಚಿಸಿ ತನಿಖೆ ನಡೆಸಿ 3 ತಿಂಗಳ ಕಾಲಮಿತಿಯೊಳಗೆ ವರದಿಯನ್ನು ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದರು.

ಕೇಂದ್ರ, ರಾಜ್ಯ ಸರಕಾರದ 50:50 ಅನುಪಾತದ ಅನುದಾನದಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ. ನಡೆದಿರುವ ಕಾಮಗಾರಿಗಳಲ್ಲಿ ಬಹುತೇಕ ರಸ್ತೆ ನಿರ್ಮಾಣ, ಒಳಚರಂಡಿ, ಉದ್ಯಾನವನಗಳ ನಿರ್ಮಾಣ ಹಾಗೂ ದುರಸ್ಥಿ ಕಾರ್ಯಗಳಿಗೆ ಅನುದಾನವನ್ನು ವೆಚ್ಚ ಮಾಡಿರುವುದಕ್ಕೆ ಬೇಸರ ಇದೆ. ಎರಡು ಸರಕಾರಗಳ ಸಮಪಾಲು ಅನುದಾನ ಇದಾಗಿದ್ದು, ಇದನ್ನು ಹೆಚ್ಚಿನ ರೀತಿಯಲ್ಲಿ ಸ್ಮಾರ್ಟ್ ಶಾಲೆಗಳು, ಆಸ್ಪತ್ರೆ, ಗ್ರಂಥಾಲಯ, ಬಸ್ ನಿಲ್ದಾಣ ಸೇರಿದಂತೆ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿತ್ತು ಎಂದರು.

ಪ್ರತಿ ಸ್ಮಾರ್ಟ್ ಸಿಟಿಗೂ ಅಂದಾಜು 990 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಶೈಕ್ಷಣಿಕ ಶೇ.2 ರಷ್ಟು, ಇಂಧನ ಶೇ.8 ರಷ್ಟು, ಆರೋಗ್ಯ ಶೇ.2 ರಷ್ಟು, ಮಾಹಿತಿ ತಂತ್ರಜ್ಞಾನಕ್ಕೆ ಶೇ.8ರಷ್ಟು ಒಟ್ಟಾರೆಯಾಗಿ ಶೇ.20 ರಷ್ಟು ಅನುದಾನವನ್ನು ಕೆರೆ ಮತ್ತು ಉದ್ಯಾನವನ ಶೇ.9 ರಷ್ಟು, ಮಾರುಕಟ್ಟೆ ಶೇ.5 ರಷ್ಟು, ರಸ್ತೆ ನಿರ್ಮಾಣ ಶೇ.36 ರಷ್ಟು, ಕ್ರೀಡಾ ವಲಯಕ್ಕೆ ಶೇ.5 ರಷ್ಟು, ಸಾರಿಗೆ ವ್ಯವಸ್ಥೆಗೆ ಶೇ.8 ರಷ್ಟು, ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶೇ.18 ರಷ್ಟು ಅನುದಾನ ಹಂಚಿಕೆಯಾಗಿದೆ.

ಈ ವಲಯಗಳಲ್ಲಿ ನಡೆದಿರುವ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಅವುಗಳಲ್ಲಿ ಕೆಲವು ಸಮರ್ಪಕವಾಗಿ ನಡೆದಿಲ್ಲ ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಗಮನಕ್ಕೆ ಬಂತು. ಈ ಸಂಬಂಧ ಎಲ್ಲ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಶರತ್, ಮುಖ್ಯ ಅಭಿಯಂತರ ನಂದೀಶ್ ಸೇರಿದಂತೆ ಪ್ರಮುಖರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News