ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಲು ಸಚಿವ ಭೋಸರಾಜು ಸೂಚನೆ

Update: 2024-08-07 15:43 GMT

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವಂತೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ವಿಕಾಸಸೌಧದಲ್ಲಿ ಪಿಎಂಕೆಎಸ್‍ವೈ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಕೇಂದ್ರ ಅನುದಾನದ ಕುರಿತು ಚರ್ಚಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.

ಪಿಎಂಕೆಎಸ್‍ವೈ ಕಾಮಗಾರಿಗಳ ಪ್ರಗತಿ ಪರಿಶೀಲನೆ: ಪಿಎಂಕೆಎಸ್‍ವೈ ಯೋಜನೆ ಅಡಿಯಲ್ಲಿ ಈಗಾಗಲೇ ಮಂಜೂರಾಗಿರುವ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಅವರು, ಅಧಿಕಾರಿಗಳಿಂದ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಈಗಾಗಲೇ ಸಲ್ಲಿಸಲಾಗಿರುವ ಪ್ರಸ್ತಾವನೆಗಳ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹತೇಕ ಅಣೆಕಟ್ಟುಗಳು ತುಂಬಿವೆ. ಆದರೂ ಕೆಲವು ಕೆರೆಗಳಲ್ಲಿ ಹೆಚ್ಚಿನ ನೀರಿನ ಸಂಗ್ರಹವಾಗದೆ ಇರುವ ಬಗ್ಗೆ ಅಧಿಕಾರಿಗಳು ವರದಿಯನ್ನು ನೀಡಿದ್ದಾರೆ. ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಕೆರೆ ತುಂಬಿಸುವ ಕಾರ್ಯವನ್ನು ಮರುಚಾಲನೆಗೊಳಿಸಬೇಕು. ಎಲ್ಲ ಕೆರೆಗಳು ತುಂಬುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಲ್ಲದೇ, ಅವುಗಳ ಸಮರ್ಪಕ ನಿರ್ವಹಣೆಗೂ ಅದ್ಯತೆ ನೀಡುವಂತೆ ಅವರು ಸೂಚನೆ ನೀಡಿದರು.

ನಿಷ್ಕ್ರಿಯ ಗೊಂಡಿರುವ ಏತ ನೀರಾವರಿ ಯೋಜನೆಗಳ ವರದಿ ನೀಡಿ: ಆಯಾ ಕಾಲಕ್ಕೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಹಲವಾರು ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡು ಅವುಗಳ ನಿರ್ಮಾಣ ಮಾಡಲಾಗಿದೆ. ಅವುಗಳ ನಿರ್ವಹಣೆ ಅವಧಿ ಮುಗಿದ ನಂತರ ಹಾಗೂ ಕಾಲಕ್ರಮೇಣ ಹಲವು ನಿಷ್ಕ್ರಿಯಗೊಂಡಿವೆ ಎಂದು ಭೋಸರಾಜು ತಿಳಿಸಿದರು.

ಆಯಾ ವಲಯವಾರು ಕೈಗೊಂಡಿರುವ ಏತ ನೀರಾವರಿ ಯೋಜನೆಗಳ ಬಗ್ಗೆ, ಈಗ ಚಾಲ್ತಿಯಲ್ಲಿರುವ, ಸರಿಯಾದ ನಿರ್ವಹಣೆ ಆಗುತ್ತಿರುವ ಹಾಗೂ ನಿಷ್ಕ್ರಿಯಗೊಂಡಿರುವ ಯೋಜನೆಗಳ ಬಗ್ಗೆ ವರದಿ ನೀಡಬೇಕು. ಇವುಗಳನ್ನು ಪುನರುಜ್ಜೀವನಗೊಳಿಸಿದರೆ ಆಗುವ ಅನುಕೂಲಗಳು ಹಾಗೂ ಅದಕ್ಕೆ ತಗಲುವ ವೆಚ್ಚದ ಬಗ್ಗೆಯು ಮಾಹಿತಿಯನ್ನು ಅದರಲ್ಲಿ ಅಳವಡಿಸುವಂತೆ ಅವರು ಸೂಚನೆ ನೀಡಿದರು.

ವಿಭಾಗವಾರು ಹಾಗೂ ಉಪವಿಭಾಗವಾರು ಕಚೇರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಜಾಗದ ಕೊರತೆಯಿದ್ದಲ್ಲಿ ಆಯಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸರಕಾರದ ಗಮನಕ್ಕೆ ತರುವಂತೆ ತಿಳಿಸಿದ ಭೋಸರಾಜು, ತೆರೆದ ಬಾವಿಗಳು ಹಾಗೂ ಹೂಳು ಎತ್ತುವ ಹೊಸ ಯೋಜನೆಗಳ ಪ್ರಸ್ತಾವನೆ ಸಲ್ಲಿಸುವುದನ್ನು ನಿಲ್ಲಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ರಾಘವನ್, ಕೇಂದ್ರ ಜಲ ಆಯೋಗದ ನಿರ್ದೇಶಕ ಹರ್ಷ ಸೇರಿದಂತೆ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್‌ ಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News