ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಸಾಧನೆ ಕೇವಲ ಚೊಂಬು : ಸಚಿವ ಝಮೀರ್ ಅಹ್ಮದ್

Update: 2024-04-24 16:26 GMT

ಬೆಂಗಳೂರು : ಕೇಂದ್ರದಲ್ಲಿ ಹತ್ತು ವರ್ಷ ಅಧಿಕಾರ ನಡೆಸಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಸಾಧನೆ ಕೇವಲ ಚೊಂಬು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಲೇವಡಿ ಮಾಡಿದ್ದಾರೆ.

ಬುಧವಾರ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರವಾಗಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಬೃಹತ್ ರೋಡ್ ನಡೆಸಿ ಸಂಗಮ್ ವೃತ್ತದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಹತ್ತು ವರ್ಷ ಅಧಿಕಾರ ನಡೆಸಿದ ಬಿಜೆಪಿ, ಐವತ್ತು ವರ್ಷ ದೇಶವನ್ನು ಹಿಂದಕ್ಕೆ ತೆಗೆದುಕೊಂಡು ಹೋಗಿದೆ. ಬಿಜೆಪಿ ಅಭಿವೃದ್ಧಿ ವಿಚಾರದಲ್ಲಿ ಮತ ಕೇಳುವುದಿಲ್ಲ. ಹಿಂದೂ -ಮುಸ್ಲಿಂ ಎಂದು ಜನರನ್ನು ವಿಭಜನೆ ಮಾಡಿ ಕೋಮುಭಾವನೆ ಕೆರಳಿಸಿ, ಪ್ರಚೋದನೆ ಮಾಡಿ, ಸುಳ್ಳು ಹೇಳಿ ಜನರನ್ನು ವಂಚಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಐದು ಗ್ಯಾರಂಟಿ ಅನುಷ್ಠಾನ ಮಾಡಿದೆ. ಆರನೇ ಗ್ಯಾರಂಟಿ ಆಗಿ ಬಡ ಕುಟುಂಬಗಳಿಗೆ 1.82 ಲಕ್ಷ ಮನೆಗಳನ್ನು ಹಂಚಿಕೆ ಮಾಡಲು ತೀರ್ಮಾನ ಕೈಗೊಂಡಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ ಒಂದು ಲಕ್ಷ ರೂ., ಯುವ ನಿರುದ್ಯೋಗಿ ಪದವೀಧರರಿಗೆ ಒಂದು ಲಕ್ಷ ರೂ., ರೈತರ ಸಾಲ ಮನ್ನಾ ಭರವಸೆ ಕೊಟ್ಟಿದೆ. ನೀವು ಆಶೀರ್ವಾದ ಮಾಡಿದರೆ ಅದನ್ನೂ ಈಡೇರಿಸಲಾಗುವುದು ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಮಾತನಾಡಿ, ಈ ಲೋಕಸಭೆ ಚುನಾವಣೆ ಅತ್ಯಂತ ಮಹತ್ವ ಪಡೆದಿದೆ. ದೇಶ ಹಾಗೂ ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್ ಬೆಂಬಲಿಸಿ. ಬಿಜೆಪಿ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕ ವ್ಯವಸ್ಥೆ ಹಾಳು ಮಾಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಮಾತನಾಡಿ, ದೇಶದ ಜನತೆ ಬದಲಾವಣೆ ಬಯಸಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರ ಮಾದರಿಯಾಗಿ ಅಭಿವೃದ್ಧಿ ಮಾಡುವ ಸಂಕಲ್ಪ ತೊಟ್ಟಿದ್ದೇನೆ. ದಯವಿಟ್ಟು ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಮೆಹರೋಝ್ ಖಾನ್, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಅಲ್ತಾಫ್ ಖಾನ್, ಮುಖಂಡರಾದ ರಿಝ್ವಾನ್, ಶೇಕ್ ಬಾಬಾ, ರವಿ, ವಿನಾಯಕ್, ಡಿ.ಸಿ.ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News