ಕೇಂದ್ರದ ಬಜೆಟ್‌ನಲ್ಲಿ ಶಿಕ್ಷಣದ ಮೂಲಭೂತ ಹಕ್ಕಿನ ಪ್ರಸ್ತಾವನೆಯೇ ಇಲ್ಲ : ಪ್ರೊ.ನಿರಂಜನಾರಾಧ್ಯ ವಿ.ಪಿ.

Update: 2024-07-24 14:18 GMT

ಬೆಂಗಳೂರು: ಕೇಂದ್ರ ಸರಕಾರದ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಶಿಕ್ಷಣದ ಮೂಲಭೂತ ಹಕ್ಕಿನ ಪ್ರಸ್ತಾವನೆಯೇ ಇಲ್ಲದಿರುವುದು ದುರದೃಷ್ಟಕರ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ ವಿ.ಪಿ. ಬೇಸರ ವ್ಯಕ್ತಪಡಿಸಿದ್ದಾರೆ.

ಬುಧವಾರ ಪ್ರಕಟನೆ ಹೊರಡಿಸಿರುವ ಅವರು, ಕೇಂದ್ರ ಪ್ರಸಕ್ತ ಸಾಲಿನ ಆಯವ್ಯಯವು ರಾಜ್ಯ ಸರಕಾರಗಳು ಮಕ್ಕಳ ಅಭಿವೃದ್ಧಿ ಹಕ್ಕುಗಳನ್ನು ಜಾರಿಗೆ ತರಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸಿ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಟೀಕಿಸಿದ್ದಾರೆ.

ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದ್ದರೂ, ಒಕ್ಕೂಟ ಸರಕಾರವು ಅದರ ಆರ್ಥಿಕ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಒಟ್ಟಾರೆ, ಸಾಂವಿಧಾನಿಕ ಹಕ್ಕುಗಳನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರಕಾರಗಳನ್ನು ಅಸಹಾಯಕ ಸ್ಥಿತಿಗೆ ತಳ್ಳುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಬಜೆಟ್‌ನಲ್ಲಿ 9 ಆದ್ಯತೆಗಳನ್ನು ಪ್ರಸ್ತಾಪಿಸಲಾಗಿದೆ. ದುರಾದೃಷ್ಟವೆಂದರೆ, ಈ ಪಟ್ಟಿಯಲ್ಲಿ ಶಿಕ್ಷಣದ ಪ್ರಸ್ತಾಪವೇ ಇಲ್ಲ. ಬಲಿಷ್ಟ ಶಿಕ್ಷಣ ವ್ಯವಸ್ಥೆಯನ್ನು ಕಟ್ಟಿಕೊಳ್ಳದೆ ಬಲಿಷ್ಠ ಭಾರತ ಹಾಗು ಸರ್ವತೋಮುಖ ಅಭಿವೃದ್ಧಿ ಕಂಡುಕೊಳ್ಳಲು ಹೇಗೆ ಸಾಧ್ಯವೆಂಬುದು ಆಶ್ಚರ್ಯಕರ ಸಂಗತಿ ಎಂದು ಅವರು ಹೇಳಿದ್ದಾರೆ.

2024-25ನೆ ಆರ್ಥಿಕ ವರ್ಷದ ಆಯವ್ಯಯದ ಗಾತ್ರ 48,20,512 ಕೋಟಿ ರೂ.ಗಳಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ಒಕ್ಕೂಟ ಸರಕಾರವು ರಾಷ್ಟ್ರೀಯ ಮಹತ್ವದ ಮತ್ತು ಸಂವಿಧಾನ ಬದ್ಧ ಮೂಲಭೂತ ಶಿಕ್ಷಣದ ಹಕ್ಕನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೊಳಿಸಲು ಸಮಗ್ರ ಶಿಕ್ಷಣ ಅಭಿಯಾನದ ಅಡಿಯಲ್ಲಿ ಮೀಸಲಿಟ್ಟಿರುವ ಹಣ ಕೇವಲ 37500 ಕೋಟಿ ರೂ. ಆಗಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಆಯವ್ಯಯಕ್ಕೆ ಹೋಲಿಸಿದರೆ ಹೆಚ್ಚಾದ ಹಣ ಕೇವಲ 46.53 ಕೋಟಿ ರೂ.ಗಳಾಗಿದೆ. ಶೇಕಡಾವರು ಲೆಕ್ಕದಲ್ಲಿ ಒಟ್ಟು ಆಯವ್ಯದಲ್ಲಿ ಶಿಕ್ಷಣ ಹಕ್ಕು ಕಾಯಿದೆ ಜಾರಿಗೆ ಸಿಕ್ಕಿರುವ ಹಣ ಕೇವಲ ಶೇ.0.78. ಆಯವ್ಯಯಕ್ಕಿಂತ ಈ ಆಯವ್ಯಯದಲ್ಲಿ ಶೇ.0.12ರಷ್ಟು ಮಾತ್ರ ಹೆಚ್ಚಾಗಿದೆ. ಸಮಗ್ರ ಶಿಕ್ಷಾ ಅಭಿಯಾನಕ್ಕೆ ನೀಡಿರುವ ಹಣಕಾಸನ್ನು ಗಮನಿಸಿದರೆ, ಈ ಮಹತ್ವದ ಒಕ್ಕೂಟ ಪ್ರಾಯೋಜಿತ ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ದೊಡ್ಡಮಟ್ಟದ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಎಂಬುದು ಸ್ಪಷ್ಟವಾಗಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News