ಅಭಿವೃದ್ಧಿಗೆ ಸಹಕಾರ ನೀಡಲು ಯೋಗೇಶ್ವರ್ ಸೇರ್ಪಡೆ : ಡಿ.ಕೆ.ಸುರೇಶ್
ಬೆಂಗಳೂರು : ರಾಮನಗರ ಜಿಲ್ಲೆ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವ ಉದ್ದೇಶದಿಂದ ಸಿ.ಪಿ.ಯೋಗೇಶ್ವರ್ ಇಂದು ಪಕ್ಷದ ತತ್ವ, ಸಿದ್ಧಾಂತ, ನಾಯಕತ್ವ ಒಪ್ಪಿ ಸ್ವಇಚ್ಛೆಯಿಂದ ಕಾಂಗ್ರೆಸ್ ಸೇರಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಮುಕ್ತ ಮನಸ್ಸಿನಿಂದ ಸ್ವಾಗತಿಸುವುದಾಗಿ ಹೇಳಿದ್ದೆ ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ನಾಯಕತ್ವವನ್ನು ಒಪ್ಪಿ ಅವರ ಮೇಲೆ ವಿಶ್ವಾಸವಿಟ್ಟು ಯೋಗೇಶ್ವರ್ ಸ್ವಇಚ್ಛೆಯಿಂದ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮನೆಗೆ ಬಂದ ಅತಿಥಿಯನ್ನು ನಾವು ಸ್ವಾಗತ ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಸಿ.ಪಿ.ಯೋಗೇಶ್ವರ್ ಅನಿವಾರ್ಯವಾದರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ. ತತ್ವ, ಸಿದ್ಧಾಂತ, ನಾಯಕತ್ವ ಒಪ್ಪಿ ಯಾರೇ ಬಂದರೂ ನಾವು ಮುಕ್ತವಾಗಿ ಸ್ವಾಗತ ಮಾಡುತ್ತೇವೆ. ಯೋಗೇಶ್ವರ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದಲೆ ಅವರು ರಾಜಕೀಯವನ್ನು ಆರಂಭಿಸಿದವರು ಎಂದು ಹೇಳಿದರು.
ರಾಮನಗರ ಜಿಲ್ಲೆಯವರಾದ ಕಾರಣ ಡಿ.ಕೆ.ಶಿವಕುಮಾರ್ ಅವರ ಕೈಬಲಪಡಿಸಿ, ಸಿದ್ದರಾಮಯ್ಯ ಅವರ ಸರಕಾರದಲ್ಲಿ ರಾಮನಗರ ಜಿಲ್ಲೆ ಹಾಗೂ ಚನ್ನಪಟ್ಟಣ ತಾಲೂಕಿನಲ್ಲಿ ಆಗುವ ಕೆಲಸಗಳಿಗೆ ಸಂಪೂರ್ಣ ಸಹಕಾರವಿದೆ ಎಂದು ಅವರು ಪಕ್ಷ ಸೇರಿದ್ದಾರೆ ಎಂದು ಸುರೇಶ್ ತಿಳಿಸಿದರು.
ಯೋಗೇಶ್ವರ್ ಇಂದು ಬೆಳಗ್ಗೆ 8 ಗಂಟೆಗೆ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದಾಗ ನಾನು ಅಲ್ಲಿಗೆ ಹೋಗಿ ಸ್ವಾಗತ ಮಾಡಿದೆ. ಅವರು ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಕಾರ್ಯಕರ್ತನಂತೆ ಸಕ್ರಿಯವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ನಂತರ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಅವರ ಗಮನಕ್ಕೆ ತಂದು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.