ಹನಿಟ್ರ್ಯಾಪ್ ಪ್ರಕರಣ | ಸಚಿವ ರಾಜಣ್ಣ ವಿರುದ್ಧ ಮೊಕದ್ದಮೆ ದಾಖಲಿಸಲು ಅನುಮತಿಗೆ ಮನವಿ

ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣ ಸಂಬಂಧ ದೂರು ನೀಡಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ಹೀಗಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕೆಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಜಿ. ಗಡಾದ್, ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಗುರುವಾರ ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಮನವಿ ಸಲ್ಲಿಸಿರುವ ಭೀಮಪ್ಪ ಗಡಾದ್, ಸಂವಿಧಾನದ ಮೇಲೆ ಪ್ರಮಾಣ ಮಾಡಿ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸದನದಲ್ಲೇ ಹನಿಟ್ರ್ಯಾಪ್ ಪ್ರಕರಣವನ್ನು ಉಲ್ಲೇಖಿಸುವ ಮೂಲಕ ರಾಜ್ಯದ ಮಾರ್ಯಾದೆ ಹಾಳು ಮಾಡಿದ್ದಾರೆ ಎಂದು ದೂರಿದ್ದಾರೆ.
ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್ ಹೇಳಿಕೆಯನ್ನು ಆಧರಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಬೇಕು. ಈ ಸಂಬಂಧ ಗೃಹ ಸಚಿವರು ಹಾಗೂ ಡಿಜಿಪಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಆದುದರಿಂದ ಸಂವಿಧಾನದ ಪಾಲಕರಾಗಿ ತಾವು ಸಚಿವ ರಾಜಣ್ಣ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಭೀಮಪ್ಪ ಗಡಾದ್ ಕೋರಿದ್ದಾರೆ.