ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ : ಸಚಿವ ಎನ್.ಎಸ್.ಭೋಸರಾಜು

Update: 2024-12-02 15:46 GMT

PC : x/@NsBoseraju

ಬೆಂಗಳೂರು: ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಶೀಘ್ರದಲ್ಲೇ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಅವರು, ಜಲಮೂಲಗಳ ಸಂರಕ್ಷಣೆ ಹಾಗೂ ಆದಾಯ ವೃದ್ಧಿಗೆ ಇಲಾಖಾವಾರು ಸಮನ್ವಯಕ್ಕೆ ಸೂಚನೆ ನೀಡಿದರು.

ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಿ: ರಾಜ್ಯದಲ್ಲಿ ಸುಮಾರು 40 ಸಾವಿರ ಜಲಮೂಲಗಳಿವೆ. ಇವುಗಳ ಸಂರಕ್ಷಣೆ ಮತ್ತು ಸಮರ್ಪಕ ನಿರ್ವಹಣೆಯಿಂದ ಅಂತರ್ಜಲ ವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ಮಧ್ಯೆ ಸಮನ್ವಯ ಬಹಳ ಮುಖ್ಯ. ಈ ಜಲಮೂಲಗಳ ನಿರ್ವಹಣೆಗೆ ಹಣಕಾಸಿನ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೀನುಗಾರಿಕೆ, ಪ್ಲೋಟಿಂಗ್ ಸೋಲಾರ್, ಬೋಟಿಂಗ್ ನಂತಹ ಆದಾಯ ಮೂಲಗಳನ್ನು ಗುರುತಿಸಬೇಕು ಎಂದು ಅವರು ಹೇಳಿದರು.

ಸಿಎಂ ಅಧ್ಯಕ್ಷತೆಯಲ್ಲಿ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ರಾಜ್ಯದ ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಯ ನಿಟ್ಟಿನಲ್ಲಿ ಹಲವಾರು ವಿಷಯಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳ ಬಗ್ಗೆ ಅಗತ್ಯ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಭೋಸರಾಜು ಸೂಚನೆ ನೀಡಿದರು.

ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ ಕೆರೆ ಬಳಕೆದಾರರ ಸಂಘಗಳನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಭೋಸರಾಜು ಸೂಚಿಸಿದರು.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ರಾಘವನ್, ಆರ್ಥಿಕ ಇಲಾಖೆ ಅಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು, ಸಹಕಾರ ಇಲಾಖೆ ಅಧಿಕಾರಿಗಳು, ನಗರ ಯೋಜನೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News