ವಿಪಕ್ಷಗಳಿಂದ ಅಧಿವೇಶನವನ್ನು ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ದುರುಪಯೋಗ: ಸಿದ್ದರಾಮಯ್ಯ

Update: 2024-07-26 09:41 GMT

ಬೆಂಗಳೂರು, ಜು.26: ಮುಂಗಾರು ಅಧಿವೇಶನವನ್ನು ವಿರೋಧ ಪಕ್ಷಗಳು ಮುಖ್ಯಮಂತ್ರಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ದುರುಪಯೋಗಪಡಿಸಿಕೊಂಡಿವೆ. ಜನಪರವಾದ ಉದ್ದೇಶ ವಿಪಕ್ಷಗಳಿಗೆ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಎರಡು ವಾರ ಕಾಲ ನಡೆದ ಅಧಿವೇಶನದಲ್ಲಿ ವಿಪಕ್ಷಗಳು ವಾಲ್ಮೀಕಿ ನಿಗಮದ ಒಂದೇ ವಿಚಾರವನ್ನು ಪ್ರಸ್ತಾಪ ಮಾಡಿವೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ಮಾತ್ರ ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದರು.

ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ+ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹಿಂದಿನ ಬಾರಿಗಿಂತ ಹೆಚ್ಚು ಸೀಟು, ಮತ ಗಳಿಸಲು ಸಾಧ್ಯವಾಗಲಿಲ್ಲ. ಕಳೆದ ಲೋಕಸಭಾ ಚುನಾವಣೆಗಿಂತ ಶೇ.13ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ನಾವು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮಮಾರ್ಗ ಹಿಡಿದಿದ್ದಾರೆ ಎಂದು ಆರೋಪಿಸಿದರು.

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತೀ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಾರೆ.ಮುಖ್ಯಮಂತ್ರಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ನಾನು ಮುಖ್ಯಮಂತ್ರಿ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News