ಹೊಸ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ : ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್
ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದಶಕಗಳ ಹಿಂದೆ ಬೆಂಗಳೂರು ನಗರದಲ್ಲಿ ಸಿಟಿ ಇಂಪೂಮೆಂಟ್ ಟ್ರಸ್ಟ್ ಬೋರ್ಡ್ ವತಿಯಿಂದ ಕೆಲವೊಂದು ನಿರ್ಜೀವ ಕೆರೆಗಳನ್ನು ಬಳಸಿಕೊಂಡು ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ. ನಿರ್ಜೀವ ಕೆರೆಗಳಲ್ಲಿ ರಚಿಸಿರುವ ಬಡಾವಣೆಗಳನ್ನು ಈಗಾಗಲೇ ಅನುಮೋದಿಸಲಾಗಿದೆ. ಪ್ರಸ್ತುತ ಯಾವುದೇ ಕೆರೆಗಳಲ್ಲಿ ಬಡಾವಣೆಗಳನ್ನು ನಿರ್ಮಿಸುತ್ತಿಲ್ಲ ಎಂದರು.
ನಿರ್ಜೀವ ಕೆರೆಗಳೆಂದು ಗುರುತಿಸುವ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸಿ ಅನುಮೋದನೆಗಾಗಿ ಕಾಯುತ್ತಿರುವ ಯಾವುದಾದರೂ ನಿರ್ದಿಷ್ಟ ಪ್ರಕರಣಗಳಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ನಿರ್ಜೀವ ಕೆರೆಗಳನ್ನು ಗುರುತಿಸಿ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲು ಅನುಮತಿ ನೀಡುವ ಸಂಬಂಧ ಅರಣ್ಯ ಸಚಿವರು ಹಾಗೂ ತಮ್ಮನ್ನು ಒಳಗೊಂಡ ಸಮಿತಿ ರಚಿಸಲಾಗಿದ್ದು, ಬಡಾವಣೆಗಳ ನಿರ್ಮಾಣ ಸೇರಿದಂತೆ ಎಲ್ಲಾ ವಿಚಾರಗಳನ್ನು ಸಮಿತಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.