ನಾಳೆಯಿಂದ(ಎ.13) 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ

Update: 2024-04-12 13:14 GMT

ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿರುವ 3 ಲೋಕಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ನಾಳೆಯಿಂದ(ಎ.13) ಎ.18ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ನಗರದ ಮೂರು ಕ್ಷೇತ್ರಗಳಾದ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟವರು 95,128 ಹಾಗೂ ವಿಶೇಷಚೇತನ ಮತದಾರರು 22,222 ಮಂದಿ ಇದ್ದಾರೆ. ಈ ಪೈಕಿ 85ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

85ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಎ.13 ರಿಂದ ಎ.18ರ ವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸಲಾಗುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಯಿಡಿಯಲಾಗುತ್ತದೆ.

ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿ ನೀಡುವರು. ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಬಾರಿ ಹೋಗುತ್ತಾರೆ. ಆ ಬಳಿಕ ಮತದಾನಕ್ಕೆ ಅವಕಾಶ ಇರುವುದಿಲ್ಲ.

ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News