ದಿಲ್ಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಮಾ.31ಕ್ಕೆ ಪ್ರತಿಭಟನೆ
ಬೆಂಗಳೂರು: ಹೊಸದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಕ್ರಮ ಬಂಧನವನ್ನು ಖಂಡಿಸಿ ಮಾ.31ರ ಬೆಳಗ್ಗೆ 10ಗಂಟೆಗೆ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಮೋಹನ್ ದಾಸರಿ ಹೇಳಿದ್ದಾರೆ.
ಬುಧವಾರ ನಗರದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನದ, ಪ್ರಜಾಪ್ರಭುತ್ವದ ಉಳಿವಿಗಾಗಿ ಮೋದಿ ಸರಕಾರದ ದುಷ್ಕೃತ್ಯಗಳನ್ನು ವಿರೋಧಿಸಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ ಮುಖಂಡರನ್ನು ಒಳಗೊಂಡಂತೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಎಎಪಿ ಹಾಗೂ ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಲಿದ್ದಾರೆ. ಮೋದಿ ಸರಕಾರದ ಕ್ರೌರ್ಯವನ್ನು ವಿರೋಧಿಸಿ ಜನಸಾಮಾನ್ಯರು ಸ್ವಇಚ್ಛೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಮೋದಿ ಸರಕಾರಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಲಿದ್ದೇವೆ ಎಂದು ಅವರು ಹೇಳಿದರು.
ಮೋದಿ ಸರಕಾರವು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮುಂತಾದ ತನಿಖಾ ಸಂಸ್ಥೆಗಳ ಮೂಲಕ ವಿರೋಧಿ ಮುಖಂಡರನ್ನು ವ್ಯವಸ್ಥಿತವಾಗಿ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ. ಚೀನಾ, ರಷ್ಯಾ, ದಕ್ಷಿಣ ಕೊರಿಯಾದಂತಹ ರಾಷ್ಟ್ರಗಳಲ್ಲಿ ಸರ್ವಾಧಿಕಾರಿ ಕೃತ್ಯಗಳು ನಡೆಯುತ್ತಿರುವ ಬಗ್ಗೆ ಕೇಳಿದ್ದೆವು. ಆದರೆ, ಭಾರತವು ಸರ್ವಾಧಿಕಾರದತ್ತ ಜಾರಿರುವುದು ಆಘಾತಕಾರಿಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಇವರ ವಿರುದ್ಧ ಜನಸಾಮಾನ್ಯರು ಎಚ್ಚೆತ್ತುಕೊಳ್ಳದಿದ್ದರೆ ದೊಡ್ಡ ಅಪಾಯ ಕಾದಿದೆ. ಪ್ರಜೆಗಳ ಪರಮೋಚ್ಛ ಹಕ್ಕಾಗಿರುವ ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಪ್ರಜೆಗಳನ್ನು ಎಚ್ಚರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮೋಹನ್ ತಿಳಿಸಿದರು.