ಕುರಿ ಮಾಂಸ ರವಾನಿಸುತ್ತಿದ್ದ ವ್ಯಾಪಾರಿಯನ್ನು ಅಡ್ಡಗಟ್ಟಿ ನಾಯಿ ಮಾಂಸ ಎಂದ ಪುನೀತ್ ಕೆರೆಹಳ್ಳಿ
ಬೆಂಗಳೂರು : ಮೆಜೆಸ್ಟಿಕ್ ನ ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ವ್ಯಾಪಾರಿ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್ ಕಾಲ್‌ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ವ್ಯಾಪಾರ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್‌ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ವ್ಯಾಪಾರ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಇನ್ನು ಜೈಪುರದಿಂದ ಬಂದ ಮಾಂಸದ ಬಗ್ಗೆ ಪುನೀತ್ ಕೆರೆಹಳ್ಳಿ ಮಾಡಿದ ಆರೋಪದ ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಗಳು ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ, ಪರಿಶೀಲನೆ ಮಾಡಿದ್ದಾರೆ. ಗುಣಮಟ್ಟ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ವೇಳೆ ಮಾತನಾಡಿದ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಸಂಗ್ರಹಿಸಿದ್ದೇವೆ. ವಿವಿಧ ಭಾಗಗಳಿಂದ ಮಾಂಸದ ಮಾದರಿ ಪಡೆದಿದ್ದೇವೆ. ಇದನ್ನು ಲ್ಯಾಬ್ ಗೆ ರವಾನಿಸಿ ಪರೀಕ್ಷಿಸಲಾಗುತ್ತದೆ. ಇದರ ವರದಿ ಬರುವುದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಪರೀಕ್ಷೆಯಲ್ಲಿ ತಿಳಿಯುತ್ತದೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೆ ವ್ಯಾಪಾರಿಯ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.