ಹಿರಿಯ ಸಾಹಿತಿ ಪಿ.ವಿ.ನಾರಾಯಣ ನಿಧನ ; ಸಿಎಂ ಸಿದ್ದರಾಮಯ್ಯ ಸಂತಾಪ

Update: 2025-04-03 18:21 IST
ಹಿರಿಯ ಸಾಹಿತಿ ಪಿ.ವಿ.ನಾರಾಯಣ ನಿಧನ ; ಸಿಎಂ ಸಿದ್ದರಾಮಯ್ಯ ಸಂತಾಪ
  • whatsapp icon

ಬೆಂಗಳೂರು : ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಹಿರಿಯ ಸಾಹಿತಿ ಪಿ.ವಿ.ನಾರಾಯಣ (82) ಅವರು ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಮೃತರು ಪತ್ನಿ, ಪುತ್ರ ಹಾಗೂ ಅಪಾರ ಸ್ನೇಹಿತರನ್ನು ಅಗಲಿದ್ದು, ಜಯನಗರದ 8ನೇ ಬ್ಲಾಕ್‍ನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

1942ರ ಡಿ.18ರಂದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಜನಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ ನಲ್ಲಿ ಸ್ನಾತಕೋತ್ತರ ಪದವಿ, ‘ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ' ಮಹಾ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿಯನ್ನು ಪಡೆದಿದ್ದಾರೆ.

ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯಕತತ್ವ, ಚಂಪೂ ಕವಿಗಳು, ವಚನ ಚಳವಳಿ, ವಚನ ವ್ಯಾಸಂಗ, ಪದ್ಮನೀ ಪರಿಣಯ, ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಪಂಪ ರಾಮಾಯಣ, ಅಂತರ, ವಿಕಾಸ, ಶೋಧನೆ ನಿರ್ಧಾರ, ಸೇರಿ ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ ಅವರು, ಬಿ.ಎಂ.ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಹಿರಿಯ ಸಾಹಿತಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

ಹಿರಿಯ ಸಾಹಿತಿ, ಸಂಶೋಧಕ ಡಾ.ಪಿ.ವಿ.ನಾರಾಯಣ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಗೆ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ನಾರಾಯಣ ಅವರ ನಿಧನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನಾರಾಯಣ ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು.

ಮುಖ್ಯಮಂತ್ರಿ ಸಿದ್ದರಾಮಯ್ಯ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News