ಈಡಿ ದಾಳಿಗೆ ರಾಜಕೀಯ ಕಾರಣವಲ್ಲ : ಆರ್.ಅಶೋಕ್

Update: 2024-10-18 12:46 GMT

ಬೆಂಗಳೂರು : ಜಾರಿ ನಿರ್ದೇಶನಾಲಯ(ಈಡಿ)ದ ದಾಳಿಗೆ ರಾಜಕೀಯ ಕಾರಣವಲ್ಲ. ಮೂರು-ನಾಲ್ಕು ಸಾವಿರ ಕೋಟಿ ರೂ.ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‍ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಕಚೇರಿಯ ಮೇಲೆ ಈಡಿ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ 1,200ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3ರಿಂದ 4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‍ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರಕಾರದ ಪಾತ್ರವೇ ಇಲ್ಲ ಎಂದರು.

ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಖಜಾನೆಗೆ ಹಣ ಬಂದರೆ ಒಳ್ಳೆಯದು. ಇದನ್ನು ಕಾಂಗ್ರೆಸ್‍ನವರು ಸ್ವಾಗತಿಸಬೇಕು. ಇದನ್ನು ರಾಜಕಾರಣ ಎನ್ನಲು ಬಿಜೆಪಿ ನಾಯಕರೇನೂ ದೂರು ನೀಡಿಲ್ಲ ಎಂದು ಅವರು ಹೇಳಿದರು.

ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂದಾದರೆ ಅಕ್ರಮ ನಡೆದಿರುವುದು ಹೇಗೆ? ನಿವೇಶನ ಮಂಜೂರಾಗಿದೆ ಎಂದಮೇಲೆ ಅದರ ಹಣ ಯಾರಿಗಾದರೂ ಸಿಕ್ಕೇ ಸಿಕ್ಕಿರುತ್ತದೆ. ಅದಕ್ಕೆ ನಗದಿನಲ್ಲಿ ಹಣ ನೀಡಲಾಗಿರುತ್ತದೆ. ಅಂತಹ ನಗದು ಕಪ್ಪುಹಣವೇ ಆಗಿರುತ್ತದೆ. ಇಡಿ ಬಗ್ಗೆ ಪ್ರಶ್ನೆ ಮಾಡುವವರು ಕೋರ್ಟ್‍ನಲ್ಲಿ ಪ್ರಶ್ನೆ ಮಾಡಬಹುದಿತ್ತು. ಆದರೆ ಸಿದ್ದರಾಮಯ್ಯನವರು ಕೋರ್ಟ್‍ಗೆ ಹೋಗಲೇ ಇಲ್ಲ. ಈಡಿಗೆ ಅಧಿಕಾರ ಇಲ್ಲವೆಂದಾದರೆ ಸಿಟ್ ಮಾಡಲು ಸರಕಾರಕ್ಕೆ ಅಧಿಕಾರವಿದೆಯೇ? ಎಂದು ಅವರು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News