ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಗೆ ಹೈಕೋರ್ಟ್ ಅನುಮತಿ

Update: 2025-04-15 23:58 IST
ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಗೆ ಹೈಕೋರ್ಟ್ ಅನುಮತಿ
  • whatsapp icon

ಬೆಂಗಳೂರು: ಕರ್ನಾಟಕ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ 439 ಕೋಟಿ ರೂ. ಗಳನ್ನು ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಚಾರ್ಚ್ ಶೀಟ್ ಸಲ್ಲಿಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಶಾಸಕ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ ಅವರಿದ್ದ ಪೀಠ, ಸಿಐಡಿ ಪೊಲೀಸರು ನಡೆಸಿದ ತನಿಖೆಗೆ ಅರ್ಜಿದಾರರು ಸಹಕರಿಸಿದ್ದು, ತನಿಖೆ ಪೂರ್ಣಗೊಂಡಿದೆ. ಆರೋಪಪಟ್ಟಿ ಸಲ್ಲಿಕೆಗೆ ಸಿದ್ಧವಾಗಿದ್ದು, ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬಹುದಾಗಿದೆ. ಆದರೆ, ವಿಶೇಷ ನ್ಯಾಯಾಲಯವು ಆರೋಪ ಪಟ್ಟಿ ಕುರಿತು ಮುಂದಿನ ಆದೇಶದವರೆಗೂ ಯಾವುದೇ ಕ್ರಮಕ್ಕೆ ಮುಂದಾಗುವಂತಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ವಿಚಾರಣೆ ವೇಳೆ ನ್ಯಾಯಪೀಠ ಜಾರಕಿಹೊಳಿ ಅವರನ್ನು ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯಲ್ಲಿ ದೋಷಮುಕ್ತಗೊಳಿಸಲಾಗಿದೆಯೇ? ಇಲ್ಲವೇ, ಆರೋಪಿಯನ್ನಾಗಿಸಲಾಗಿದೆಯೇ ಎಂದು ಸರಕಾರದ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ವಕೀಲರು, ಪ್ರಕರಣ ಸಂಬಂಧ 2,000 ಪುಟಗಳ ಆರೋಪ ಪಟ್ಟಿ ಸಿದ್ಧಪಡಿಸಿದ್ದು, ಅರ್ಜಿದಾರರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. 

ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಎಫ್‌ಐಆರ್ ಪ್ರಶ್ನಿಸಿ ಈ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಆರೋಪ ಪಟ್ಟಿಸಲ್ಲಿಸಿರುವುದರಿಂದ ಪ್ರಸ್ತುತ ಅರ್ಜಿಯ ಮೂಲ ಉದ್ದೇಶ ವಿಫಲವಾಗಲಿದೆ ಎಂದು ತಿಳಿಸಿದರು.

ಈ ವೇಳೆ ಸರಕಾರಿ ವಕೀಲರು, ಅರ್ಜಿದಾರರು ಪ್ರಕರಣದಿಂದ ತಮ್ಮನ್ನು ಮುಕ್ತ ಗೊಳಿಸುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ವಾದ ಆಲಿಸಿದ ಪೀಠ ಈ ಮೇಳಿನಂತೆ ಆದೇಶ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News