ಅತ್ಯಾಚಾರ ಆರೋಪ ಪ್ರಕರಣ | ಸೆ.25ಕ್ಕೆ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ

Update: 2024-09-23 15:29 GMT

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಆದೇಶಿಸಿದೆ.

ರಾಮನಗರದ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ಮುನಿರತ್ನ ಪರ ವಕೀಲ ಅಶೋಕ ಹಾರನಹಳ್ಳಿ ಅವರು ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯವು ಸೋಮವಾರ ವಿಚಾರಣೆ ಕೈಗೆತ್ತಿಕೊಳ್ಳುತ್ತಿದ್ದಂತೆ ವಾದ ಮಂಡಿಸಿದ ಎಸ್‍ಐಟಿ ವಿಶೇಷ ಅಭಿಯೋಜಕ(ಎಸ್‍ಪಿಪಿ) ಎಸ್.ಪಿ.ಪ್ರದೀಪ್, ದೂರುದಾರ ಮಹಿಳೆಗೆ ಜಾಮೀನು ಅರ್ಜಿ ಸಿಕ್ಕಿಲ್ಲ. ಅಲ್ಲದೆ, ನನಗೂ ತಡವಾಗಿ ನೋಟಿಸ್ ಪ್ರತಿ ದೊರೆತಿದೆ. ಹೀಗಾಗಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ಮನವಿ ಮಾನ್ಯ ಮಾಡಿದ ನ್ಯಾಯಾಲಯ, ಸೆ.25ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು.

ಪೊಲೀಸ್ ವಶಕ್ಕೆ ಕೋರಿ ಎಸ್‌ಐಟಿ ಮನವಿ: ನ್ಯಾಯಾಂಗ ಬಂಧನದಲ್ಲಿರುವ ಮುನಿರತ್ನ ಅವರನ್ನು 14 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಬೇಕೆಂದು ವಿಶೇಷ ತನಿಖಾ ತಂಡ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯನ್ನು ಸೆ.24ರ ಬೆಳಗ್ಗೆ 11ಕ್ಕೆ ಮುಂದೂಡಿತು. ಶಾಸಕ ಮುನಿರತ್ನ ಅವರನ್ನು ಈ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಬೇಕೆಂದು ಜೈಲಾಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News